ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಕಾರಣ: ಮೋದಿ ಅರೋಪ

Last Updated 28 ಡಿಸೆಂಬರ್ 2018, 20:25 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯ ಕಬ್ಬು ಬೆಳೆಗಾರರ ಸಂಕಷ್ಟ ಬಹಳ ಶೋಚನೀಯವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

‘ನಮೋ ಆ್ಯಪ್’ ಮೂಲಕ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಶುಕ್ರವಾರ ನಡೆದ ‘ಮೇರಾ ಬೂತ್ ಸಬ್ ಸೇ ಮಜಬೂತ್’ ನೇರಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಉತ್ತರ ಕ್ಷೇತ್ರದ ಮಂಡಲ ಅಧ್ಯಕ್ಷ ಶ್ರೀನಿವಾಸ ಬೀಸನಕೊಪ್ಪ ಪ್ರಶ್ನೆಗೆ ಅವರು ಉತ್ತರಿಸಿದರು.

‘ಕರ್ನಾಟಕದ ಜನರು ಭ್ರಷ್ಟಾಚಾರ ಮುಕ್ತ ಅಭಿವೃದ್ಧಿ ಆಗಬೇಕು ಎಂದು ಬಯಸುತ್ತಿದ್ದಾರೆ. ಆದರೆ ಅಧಿಕಾರದಲ್ಲಿ ಇರುವವರು ಅಭಿವೃದ್ಧಿ ಮುಕ್ತ ಭ್ರಷ್ಟಾಚಾರ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ. ಅಧಿಕಾರ ಹಿಡಿಯಬೇಕೆಂಬ ಉದ್ದೇಶದಿಂದ ಸರ್ಕಾರ ರಚನೆ ಮಾಡಲಾಗಿದೆ. ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

‘ಕರ್ನಾಟಕದಲ್ಲಿ ಈಗ ನಿತ್ಯ ಒಂದೇ ಮಾತು ಕೇಳುತ್ತಿದೆ. ಅದು ಅಧಿಕಾರಕ್ಕಾಗಿ ತೃಪ್ತರು ಮತ್ತು ಅತೃಪ್ತರು ಎಂಬ ವಿಷಯ. ಅದನ್ನು ಬಿಟ್ಟು ಬೇರೆ ಚರ್ಚೆಗಳೇ ಇಲ್ಲ. ಅಧಿಕಾರಕ್ಕಾಗಿ ಮ್ಯೂಸಿಕಲ್ ಚೇರ್ ಆಟ ನಡೆದಿದೆ’ ಎಂದು ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಕುರಿತು ವ್ಯಂಗ್ಯವಾಡಿದರು.

‘ಈ ಪರಿಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತರು ಜನರ ದನಿಯಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ವೀರರಾಣಿ ಕಿತ್ತೂರು ಚನ್ನಮ್ಮನ ನಾಡು ಬೆಳಗಾವಿ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾದ ಹೆಮ್ಮೆಯ ನಗರ. ಇದರ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ’ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಅವರೊಂದಿಗೆ ಮಾತನಾಡಿದ ಬಿಜೆಪಿ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಕ್ಕೆ ಹಾಗೂ ಸಾಂಬ್ರಾ ವಿಮಾನನಿಲ್ದಾನವನ್ನು ಉಡಾನ್‌ಗೆ ಸೇರಿಸಿದ್ದಕ್ಕೆ ಧನ್ಯವಾದ ಸಮರ್ಪಿಸಿದರು.

ಕಾರ್ಯಕರ್ತರ ಜಗಳ:

ಕೆಎಲ್‌ಇ ಶತಮಾನೋತ್ಸವ ಸಭಾಂಗಣದಲ್ಲಿ ನಡೆದ ಸಂವಾದ ಮುಗಿಸಿ ಬರುವಾಗ ಕಾರ್ಯಕರ್ತರು ಜಗಳ ಮಾಡಿಕೊಂಡರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿಲ್ಲ. ಸಂವಾದ ವೇಳೆ ಕೊರಳಿಗೆ ಬಿಜೆಪಿ ಶಲ್ಯ ತಂದಿರಲಿಲ್ಲ. ಮತಗಟ್ಟೆ ಕಾರ್ಯಕರ್ತರಿಗೆ ಸಂವಾದದ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.

ನಗರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದೀಪಕ ಜಮಖಂಡಿ ಹಾಗೂ ಶಶಿಕಾಂತ ಪಾಟೀಲ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT