ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

HDK, ರೆಡ್ಡಿ, ಇತರರ ವಿರುದ್ಧ ಪ್ರಾಸಿಕ್ಯೂಷನ್‌: ರಾಜ್ಯಪಾಲರಿಗೆ ಕಾಂಗ್ರೆಸ್‌ ಮನವಿ

Published : 31 ಆಗಸ್ಟ್ 2024, 10:12 IST
Last Updated : 31 ಆಗಸ್ಟ್ 2024, 10:12 IST
ಫಾಲೋ ಮಾಡಿ
Comments

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್‌ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಮೇಲಿನ ಪ್ರಕರಣದಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ನಿಯೋಗ ಶನಿವಾರ ಮನವಿ ಸಲ್ಲಿಸಿತು.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಿಂದ ರಾಜಭವನದವರೆಗೆ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್‌ ಮುಖಂಡರು ಕಾಲ್ನಡಿಗೆಯಲ್ಲಿ ತೆರಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಲಿಲ್ಲ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ನೀಡಿದ ಮನವಿಯಲ್ಲಿ ಕಾಂಗ್ರೆಸ್‌ ಒತ್ತಾಯಿಸಿದೆ.

ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್,  ‘ಯಾರೊ ದೂರು ಕೊಟ್ಟರೆಂದು  ಮುಖ್ಯಮಂತ್ರಿ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ– ಜೆಡಿಎಸ್‌ ನಾಯಕರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅವರು ಅನುಮತಿ ಕೊಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು‌. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಕೊಡಿ ಎಂದು ಮನವಿ ಮಾಡಿದ್ದೇವೆ’ ಎಂದರು.

ನಾಲ್ವರ ಪ್ರಾಸಿಕ್ಯೂಷನ್ ಅರ್ಜಿ ಇತ್ಯರ್ಥ ಆಗಿದೆ

‘ಎಚ್.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಅರ್ಜಿ ಸಂಬಂಧ ನಮ್ಮ ಬಳಿ ಏನೂ ಇಲ್ಲ. ಎಲ್ಲ ವಿಲೇವಾರಿ  ಮಾಡಿದ್ದೇವೆಂದು ರಾಜ್ಯಪಾಲರು ಹೇಳಿದರು’ ಎಂದು ಶಿವಕುಮಾರ್ ತಿಳಿಸಿದರು.

‘ರಾಜ್ಯಪಾಲರ ಜೊತೆ ಏನು ಮಾತನಾಡಿದ್ದೇವೆ ಎಂಬುದನ್ನು ಎಲ್ಲವನ್ನೂ ಹೇಳುವುದಕ್ಕೆ ಆಗುವುದಿಲ್ಲ. ರಾಜ್ಯಪಾಲರ ಹುದ್ದೆ, ರಾಜಭವನದ ಗೌರವ ಕಾಪಾಡಬೇಕೆಂದು ಮನವಿ ಮಾಡಿದ್ದೇವೆ. ರಾಜ್ಯಪಾಲರು ಮಾತನಾಡಿದ್ದನ್ನೆಲ್ಲಾ ಹೇಳಲು ಆಗುವುದಿಲ್ಲ. ಆದರೆ, ನಮ್ಮ ಕಚೇರಿಯಲ್ಲಿ ಆ ದಾಖಲೆಗಳಿಲ್ಲ ಅಂದಿದ್ದಾರೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ’  ಎಂದರು.

ಅದಕ್ಕೂ ಮೊದಲು ವಿಧಾನಸೌಧ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ,  ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ ‘ಕೈ’ ನಾಯಕರು, ಬಿಜೆಪಿ– ಜೆಡಿಎಸ್‌ ನಾಯಕರ ಮೇಲಿನ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಆಗ್ರಹಿಸಿದರು. ಕೇಂದ್ರದ ಚುಕ್ಕಾಣಿಯಂತೆ, ಬಿಜೆಪಿ ಏಜೆಂಟ್‌ರಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗಾಂಧಿ ಪ್ರತಿಮೆಯ ಬಳಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ಪರವಾಗಿ ನಾವು ರಾಜಭವನ ಚಲೊ ಮಾಡುತ್ತಿಲ್ಲ. ರಾಜ್ಯಪಾಲರ ಆದೇಶ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯಪಾಲರ ಕಚೇರಿ ದುರಪಯೋಗ ಆಗುತ್ತಿದೆ. ಅದರ ವಿರುದ್ಧ ನಮ್ಮ ಹೋರಾಟ’ ಎಂದರು.

‘ಮುಖ್ಯಮಂತ್ರಿ ವಿಚಾರದಲ್ಲಿ ಒಂದೇ ದಿನದಲ್ಲಿ ನೋಟಿಸ್ ನೀಡಿರುವುದು ಎಲ್ಲರಿಗೂ ಗೊತ್ತು. ಈ ಹಿಂದೆ ರಾಜ್ಯಪಾಲರ ಬಳಿ ಹಲವರ ಕಡತ ಹೋಗಿದೆ. ರಾಜ್ಯಪಾಲರು ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT