ಹುಬ್ಬಳ್ಳಿ: ‘ಜೈನ ಮುನಿಗಳು ಧರ್ಮ ಪ್ರಚಾರಕ್ಕಾಗಿ ವಿಹಾರ ನಡೆಸುವ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದ್ದು, ಪೊಲೀಸ್ ಇಲಾಖೆಯಿಂದ ಎಲ್ಲಾ ಠಾಣೆಗಳಿಗೆ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಚಿಕ್ಕೋಡಿ ಕಾಮಕುಮಾರ ಮುನಿ ಹತ್ಯೆ ಹಿನ್ನೆಲೆಯಲ್ಲಿ ಗುಣಧರನಂದಿ ಮಹಾರಾಜರು ಜೈನ ಮುನಿಗಳಿಗೆ ರಕ್ಷಣೆ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಅವುಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ’ ಎಂದರು.
‘ಮುನಿಗಳು ವಿಹಾರ ಸಂದರ್ಭದಲ್ಲಿ ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಅವಕಾಶ ನೀಡಬೇಕು ಎಂದು ವಿನಂತಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜೈನ ನಿಗಮ ಮಂಡಳಿ ರಚನೆ ಸ್ಥಾಪಿಸಬೇಕೆನ್ನುವ ಬೇಡಿಕೆ ಸಹ ಮುಂದಿಟ್ಟಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜೈನ ಮಂದಿರಗಳ ಅತಿಕ್ರಮಣ ಮತ್ತು ದಬ್ಬಾಳಿಕೆ ಕುರಿತು ಪೊಲೀಸ್ ಇಲಾಖೆಗೆ ತಿಳಿಸಿದರೆ, ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.