ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಹಗರಣ: ಅರ್ಜಿ ವಿಚಾರಣೆ 16ಕ್ಕೆ ಮುಂದೂಡಿಕೆ

Published 7 ಆಗಸ್ಟ್ 2023, 16:14 IST
Last Updated 7 ಆಗಸ್ಟ್ 2023, 16:14 IST
ಅಕ್ಷರ ಗಾತ್ರ

ಬೆಂಗಳೂರು: ‘ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಈ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಬೇಕು‘ ಎಂದು ಕೋರಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ಗೆ ಇದೇ 16ಕ್ಕೆ ಮುಂದೂಡಿದೆ.

ಈ ಕುರಿತಂತೆ ಎನ್.ವಿ. ಚಂದನ್ ಸೇರಿದಂತೆ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದರು. ಇದೇ ವೇಳೆ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರೂ, ಅರ್ಜಿಯನ್ನು ಇದೇ 16ರಂದು ವಿಚಾರಣೆಗೆ ನಿಗದಿಪಡಿಸುವಂತೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು. ಅಂತೆಯೇ, ಅಂದು ಅರ್ಜಿಗೆ ಸಂಬಂಧಿಸಿದ ಉಭಯ ಪಕ್ಷಗಾರರು ವಾದ ಮಂಡನೆಗೆ ಸಿದ್ಧವಾಗಿರಬೇಕು ಎಂದು ಮೌಖಿಕವಾಗಿ ಸೂಚಿಸಿತು.

ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಈ ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿತ್ತು. ಮರುಪರೀಕ್ಷೆ ನಡೆಸುವುದಾಗಿ 2022ರ ಏಪ್ರಿಲ್‌ 29ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೆಎಟಿ 2022ರ ಜುಲೈ 19ರಂದು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಹೊಸದಾಗಿ ಲಿಖಿತ ಪರೀಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆಪ್ಟೆಂಬರ್ 28ರಂದು ಮಧ್ಯಂತರ ತಡೆ ನೀಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT