ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ತಂದುಕೊಡದ ಗ್ಯಾರಂಟಿ: ಅಶೋಕ ವ್ಯಂಗ್ಯ

Published 10 ಜೂನ್ 2024, 16:31 IST
Last Updated 10 ಜೂನ್ 2024, 16:31 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿಗಳಿಂದ ಮತ ಬಂದಿಲ್ಲ. ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಶೂನ್ಯವಾಗಿ ಕಾಂಗ್ರೆಸ್‌ ಸೋತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

‘ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭಾ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ’ ಎಂದು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆಗಳಲ್ಲಿ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು, ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಮತ್ತು ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ’ ಎಂದರು.

‘ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆಗಳಲ್ಲಿ ಹಿನ್ನಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ’ ಎಂದು ಅಶೋಕ ಹೇಳಿದರು.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್‌ ಕನಕಪುರದಲ್ಲೇ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ ₹187 ಕೋಟಿ ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ’ ಎಂದರು.

‘ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ. ಮಾಫಿಯಾ, ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ’ ಎಂದು ಹೇಳಿದರು.

ತೆರಿಗೆ ಭಾರದಿಂದ ಜನ ಬಳಲಿ ಹೋಗಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಇದೀಗ ಕಸಕ್ಕೂ ತೆರಿಗೆ ಹಾಕುವುದು ಖಂಡನೀಯ ಎಂದು ಅಶೋಕ ಹೇಳಿದರು. ಮುಂದಿನ ದಿನಗಳಲ್ಲಿ ಹಾಲು ಆಲ್ಕೋಹಾಲ್‌ ಬಸ್‌ ಟಿಕೆಟ್‌ ದರವನ್ನೂ ಹೆಚ್ಚಿಸಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT