ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯನವರೇ, ಅಹಂಕಾರದ ಮಾತುಗಳಿಂದ ನಮ್ಮ ಬಾಯಿ ಮುಚ್ಚಿಸಲಾಗದು: ಆರ್. ಅಶೋಕ

Published 31 ಮೇ 2024, 5:29 IST
Last Updated 31 ಮೇ 2024, 5:29 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿಯ ಇ.ವಿ ವಾಹನಗಳಲ್ಲಿ ಕೇರಳದವರಿಗೆ ಉದ್ಯೋಗ ನೀಡಲಾಗಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ನಡುವಿನ ಸಾಮಾಜಿಕ ಜಾಲತಾಣದಲ್ಲಿ ಮಾತಿನ ಸಮರ ಮುಂದುವರಿದಿದೆ.

ವಿಷಯ ಸಂಬಂಧ ಸಿದ್ದರಾಮಯ್ಯ ಅವರ ಸ್ಪಷ್ಟೀಕರಣಕ್ಕೆ ಆರ್. ಅಶೋಕ ತಿರುಗೇಟು ನೀಡಿದ್ದಾರೆ.

‘ತಾವು ಅಪರೂಪಕ್ಕೆ ತಮ್ಮ ಪ್ರಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದೀರಿ. ಮೊದಲು ಅದಕ್ಕೆ ಅಭಿನಂದನೆಗಳು’ ಎಂದು ವ್ಯಂಗ್ಯವಾಡಿದ್ದಾರೆ.

‘ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಟ್ವೀಟ್ ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ. ನಿಮ್ಮ ರೀತಿಯ ಅಹಂಕಾರದ ಮಾತುಗಳು ನನಗೆ ಬರುವುದಿಲ್ಲ, ಅದು ನನಗೆ ಬೇಡವೂ ಬೇಡ. ಆದರೆ ಜೂನ್ 4ರಂದು ಯಾರು ಯಾರಿಗೆ ದೊಣ್ಣೆ ಕೊಟ್ಟು ಹೊಡಿಸಿಕೊಳ್ಳುತ್ತಾರೆ, ಜೂನ್ 4 ರ ನಂತರ ಬಡಿಗೆಯಿಂದ ಹೊಡೆದು ಯಾರು ಯಾರನ್ನ ಕುರ್ಚಿಯಿಂದ ಕೆಳಗಿಳಿಸುತ್ತಾರೆ ನೋಡೋಣ’ ಎಂದು ಹೇಳಿದ್ದಾರೆ.

‘ತಾವು ಅಪರೂಪಕ್ಕೆ ತಮ್ಮ ಪ್ರಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದೀರಿ. ಮೊದಲು ಅದಕ್ಕೆ ಅಭಿನಂದನೆಗಳು. ಆದರೆ ಅದರಲ್ಲೂ ಮೈಯೆಲ್ಲಾ ಎಣ್ಣೆ ಸವರಿಕೊಂಡಿರುವಂತೆ ತಮ್ಮ ಕರ್ತವ್ಯದಿಂದ ಜಾರಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೋರಿಸುತ್ತೀರಲ್ಲ ತಮ್ಮ ಭಂಡತನಕ್ಕೆ ಏನು ಹೇಳಬೇಕು’ ಎಂದು ಪ್ರಶ್ನಿಸಿದ್ದಾರೆ.

‘ಪತ್ರಿಕೆಗಳಲ್ಲಿ ಹತ್ತಾರು ಕೋಟಿ ಖರ್ಚು ಮಾಡಿ ಪುಟಗಟ್ಟಲೆ ಜಾಹೀರಾತು ಕೊಡುವಾಗ ಅದು ನಿಮ್ಮ ಯೋಜನೆ. ಹಸಿರು ಬಾವುಟ ತೋರಿಸಿ ಬಸ್ಸಿಗೆ ಚಾಲನೆ ನೀಡುವಾಗ ಅದು ತಮ್ಮ ಸರ್ಕಾರದ ಕೊಡುಗೆ. ಆದರೆ ಅದರಲ್ಲಿ ನ್ಯೂನತೆಗಳು ಕಂಡು ಬದರೆ ಅದು ಕೇಂದ್ರ ಸರ್ಕಾರದ ಹೊಣೆ. ಇದು ಯಾವ ಸೀಮೆ ಆಡಳಿತ ಸ್ವಾಮಿ? ತಮಗೆ ಕರ್ನಾಟಕದ ಜನತೆ ಅಧಿಕಾರ ಕೊಟ್ಟಿರುವುದು ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳಲಿ ಅಂತ ಅಲ್ಲ’ ಎಂದು ಕುಟುಕಿದ್ದಾರೆ.

‘ನಿಮಗೆ ನಿಜವಾಗಿಯೂ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವ ಬದ್ಧತೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಡಬಹುದಿತ್ತಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ತಾವು, ಎಲ್ಲದಕ್ಕೂ ಕೇಂದ್ರ ಮಂತ್ರಿಗಳಿಗೆ ಮನವಿ ಪತ್ರ ಕೊಡುವ ತಾವು ಇದಕ್ಕೆ ಮಾತ್ರ ಯಾಕೆ ಮಾಡಲಿಲ್ಲ. ಅಸಲಿಗೆ ನಾನು ಈ ವಿಷಯ ಪ್ರಸ್ತಾಪ ಮಾಡುವವರೆಗೂ ನಿಮಗೆ ಈ ವಿಷಯ ಗೊತ್ತೇ ಇರಲಿಲ್ಲ. ಇದು ನಿಮ್ಮ ಆಡಳಿತ ವೈಖರಿ’ ಎಂದು ಹೇಳಿದ್ದಾರೆ.

‘ನಾಲ್ಕು ಅಹಂಕಾರದ ಮಾತುಗಳು ಆಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ತಿಳಿದಿದ್ದರೆ ಅದು ತಮ್ಮ ಭ್ರಮೆ. ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್’ ಎಂದು ಅಶೋಕ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT