ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಭಸದ ಮಳೆ: ಕೆರೆಗಳು ಭರ್ತಿ

ಶಿರಾಡಿಘಾಟ್‌ನಲ್ಲಿ ಧರೆಗುರುಳಿದ ಮರಗಳು
Published 9 ಜೂನ್ 2024, 15:33 IST
Last Updated 9 ಜೂನ್ 2024, 15:33 IST
ಅಕ್ಷರ ಗಾತ್ರ

ಕಲಬುರಗಿ/ ಹಾಸನ: ಕಲಬುರಗಿ, ಹಾಸನ, ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರ ಮಳೆಯಾಗಿದೆ.

ಕಲಬುರಗಿ ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಜೋರು ಮಳೆಯಾಯಿತು. ಶನಿವಾರ ರಾತ್ರಿ ಸುರಿದ ಮಳೆಗೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜೀರಹಳ್ಳಿ ಕೆರೆ ಭರ್ತಿಯಾಗಿದೆ. ಹೆಚ್ಚುವರಿ ನೀರು ರಭಸವಾಗಿ ಹೊರ ಹರಿದು ರಸ್ತೆಯೊಂದು ಕೊಚ್ಚಿಕೊಂಡು ಹೋಗಿದೆ. ಮುನ್ನೋಳಿ ಕೆರೆಯ ಒಡಲು ಸಹ ತುಂಬಿದೆ.

ಹಾಸನ ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆ ಸುರಿಯಿತು. ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ನಲ್ಲಿ ಜೋರು ಮಳೆ– ಧಾರಾಕಾರ ಮಳೆಯಿಂದ ಮರಗಳು ರಸ್ತೆಗೆ ಉರುಳುತ್ತಿದ್ದು, ಎಚ್ಚರಿಕೆಯಿಂದ ಸಂಚರಿಸುವಂತೆ ವಾಹನ ಸವಾರರಿಗೆ ತಾಲ್ಲೂಕು ಆಡಳಿತ ಸೂಚಿಸಿದೆ.

ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಅಲ್ಲಲ್ಲಿ ಗಿಡಗಳು ರಸ್ತೆಗೆ ಅಡ್ಡಲಾಗಿ ಉರುಳಿವೆ. ಮಡಿಕೇರಿ, ನಾಪೋಕ್ಲು ಭಾಗದಲ್ಲಿ ಹೆಚ್ಚು ರಭಸದ ಮಳೆಯಾಯಿತು, ಸೋಮವಾರಪೇಟೆ, ವಿರಾಜಪೇಟೆ ಭಾಗದಲ್ಲಿ ಸಾಧಾರಣ ಮಳೆ ಬಿದ್ದಿತು. ಮೈಸೂರು ನಗರದಲ್ಲೂ ತುಂತುರು ಮಳೆಯಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಜೋರಾಗಿ  ಸುರಿಯುತ್ತಿದೆ; ಭಾನುವಾರ ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ. ಶನಿವಾರ ರಾತ್ರಿಯೂ ಜೋರು ಮಳೆ ಇತ್ತು. ಸೋಮವಾರವೂ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನಿಂದ ಕೂಡಿರುವ  ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದೇ 11ರಂದು ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಭಾನುವಾರವೂ ಸಾಧಾರಣ ಮಳೆಯಾಗಿದೆ. ರಾತ್ರಿ ವೇಳೆಗೆ ಮಳೆ ಬಿರುಸುಗೊಂಡಿದೆ.

ಏರಿಕೆಯಾದ ಒಳಹರಿವು: ಹೊಸಪೇಟೆ ನಗರ ಸಹಿತ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದ್ದು, ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 2,750 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಜಲಾಶಯದಲ್ಲಿ ಸದ್ಯ 4.16 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜೂನ್‌ 1ರಿಂದ ಜಲಾಶಯಕ್ಕೆ ಒಳಹರಿವು ಆರಂಭವಾಗಿತ್ತು. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT