ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪ್ರೊ.ಎಂ.ಡಿ. ನಂಜುಂಡಸ್ವಾಮಿ ನೆನಪು, ರೈತ ಸಮಾವೇಶ
Published 10 ಫೆಬ್ರುವರಿ 2024, 15:27 IST
Last Updated 10 ಫೆಬ್ರುವರಿ 2024, 15:27 IST
ಅಕ್ಷರ ಗಾತ್ರ

ಬೆಂಗಳೂರು: ‘ಭೂ ಸುಧಾರಣಾ ಕಾಯ್ದೆ–2020ಕ್ಕೆ ತಿದ್ದುಪಡಿ ತರುವಂತೆ ರೈತರಿಂದ ಬೇಡಿಕೆಯಿದ್ದು ಸದ್ಯದಲ್ಲೇ ಆ ಕಾಯ್ದೆಗೆ ತಿದ್ದುಪಡಿ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ರೈತ ಸಂಘ ಶನಿವಾರ ಇಲ್ಲಿ ಆಯೋಜಿಸಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿ ನೆನಪು, ರೈತ ಸಮಾವೇಶ ಹಾಗೂ ರೈತರ ಪರ ಬಜೆಟ್‌ ರೂಪಿಸಲು ಹಕ್ಕೊತ್ತಾಯ ಮಂಡನಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಪಿಎಂಸಿ ಕಾಯ್ದೆಗೂ ತಿದ್ದುಪಡಿ ತರಲಾಗಿದೆ. ಆಕ್ಷೇಪಣೆಗಳು ಬಂದ ಕಾರಣಕ್ಕೆ ಜಂಟಿ ಸದನ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಬಳಿಕ ಮತ್ತೆ ಉಭಯ ಸದನಗಳಲ್ಲಿ ಮಸೂದೆ ಮಂಡಿಸಲಾಗುವುದು’ ಎಂದು ಹೇಳಿದರು.

‘ಕೃಷಿಕರ ಗಂಡು ಮಕ್ಕಳ ಮದುವೆಗೆ ವಧು ಸಿಗುತ್ತಿಲ್ಲ ಎಂದು ರೈತ ಮುಖಂಡರು ಗಮನ ಸೆಳೆದಿದ್ದಾರೆ. ಮೂಲತಃ ಎಲ್ಲರೂ ಕೃಷಿಕರ ಮಕ್ಕಳೇ. ಕೃಷಿಯನ್ನು ಲಾಭದಾಯಕ ಮಾಡಿದರೆ, ರೈತರು ಎದುರಿಸುತ್ತಿರುವ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲು ಸಾಧ್ಯ. ಬಜೆಟ್‌ನಲ್ಲಿ ರೈತ ಪರ ಯೋಜನೆಗಳಿಗೆ ಆದ್ಯತೆ ಸಿಗಲಿದೆ’ ಎಂದು ಹೇಳಿದರು.

‘ಕೃಷಿ ಅವಲಂಬಿತರ ಸಂಖ್ಯೆ ಶೇ 80ರಿಂದ ಶೇ 60ಕ್ಕೆ ಇಳಿಕೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವುದು ಅಗತ್ಯ’ ಎಂದು ಪ್ರತಿಪಾದಿಸಿದರು.

ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಬಗರ್‌ಹುಕುಂ ಸಾಗುವಳಿ ಪತ್ರ ಪಡೆಯಲು ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಕಂದಾಯ ಇಲಾಖೆಯಲ್ಲಿ ರೈತರಿಗೆ ಸಂಬಂಧಿಸಿದ ಕೆಲಸಗಳನ್ನು ಅಧಿಕಾರಿಗಳು ಮಾಡಿಕೊಡುತ್ತಿಲ್ಲ’ ಎಂದು ಆಪಾದಿಸಿದರು.

‘₹5 ಲಕ್ಷ ಪ್ರೋತ್ಸಾಹಧನ ಕೊಡಿ’: ‘ಕೃಷಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಫೆ.16ರಂದು ಬಜೆಟ್‌ನಲ್ಲಿ ಘೋಷಿಸಬೇಕು’ ಎಂದು ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

‘ಕೋವಿಡ್–19 ನಂತರ ಯುವಕರು ಕೃಷಿಯತ್ತ ಆಸಕ್ತಿ ತೋರುತ್ತಿದ್ದಾರೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ₹20 ಲಕ್ಷದ ವರೆಗೆ ಪ್ರೋತ್ಸಾಹಧನ ನೀಡಬೇಕು’ ಎಂದು ಒತ್ತಾಯಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ದರ್ಶನ್ ಪುಟ್ಟಣ್ಣಯ್ಯ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಹಾಜರಿದ್ದರು.

‘ಪೊಲೀಸರಿಂದ ಎರಡು ಬಾರಿ ಪೆಟ್ಟು ತಿಂದಿದ್ದೆ’: ಸಿ.ಎಂ

‘ನಾನು ಕಾನೂನು ಪದವಿ ಪಡೆಯುತ್ತಿದ್ದ ಮೈಸೂರಿನ ಶಾರದಾ ವಿಲಾಸ ಕಾಲೇಜಿನಲ್ಲಿ ನಂಜುಂಡಸ್ವಾಮಿ ಅವರು ಪ್ರಾಧ್ಯಾಪಕರಾಗಿದ್ದರು. ನಿತ್ಯ ಸಂಜೆ ಕ್ಯಾಂಟೀನ್‌ನಲ್ಲಿ ಸೇರಿ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದಾಗ ನಾನೂ ಎರಡು ಬಾರಿ ಪೊಲೀಸರಿಂದ ಪೆಟ್ಟು ತಿಂದಿದ್ದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ಘಟನಾವಳಿಗಳನ್ನು ನೆನಪಿಸಿಕೊಂಡರು. ‘ನಾನು ರಾಜಕೀಯ ಕ್ಷೇತ್ರಕ್ಕೆ ಬರುವುದಕ್ಕೂ ಮೊದಲು ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದೆ. ನಂತರ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದಾಗ ರೈತ ಸಂಘದಿಂದ ನನ್ನನ್ನು ಉಚ್ಚಾಟನೆ ಮಾಡಲಾಗಿತ್ತು’ ಎಂದು ಹೇಳಿದರು.

ಸಮಾವೇಶದ ಪ್ರಮುಖ ನಿರ್ಣಯಗಳು

* ಬರ ಪರಿಹಾರಕ್ಕೆ ಅನುದಾನ ಕಲ್ಪಿಸದ ಕೇಂದ್ರ ಸರ್ಕಾರದ ಕ್ರಮಕ್ಕೆ ಖಂಡನೆ

* ಪ್ರತಿ ಹೆಕ್ಟೇರ್‌ಗೆ ₹25 ಸಾವಿರ ಬರ ಪರಿಹಾರ ಒದಗಿಸಲು ಆಗ್ರಹ

* ಕೃಷಿ ಬೆಲೆ ಆಯೋಗ ಸಬಲೀಕರಣಕ್ಕೆ ಒತ್ತಾಯ. ಆಯೋಗದ ಅಧ್ಯಕ್ಷರಾಗಿ ಕೃಷಿ ತಜ್ಞರನ್ನೇ ನೇಮಿಸಲು ಪಟ್ಟು

* ಕೊಡಗು ಚಿಕ್ಕಮಗಳೂರು ಹಾಸನ ಜಿಲ್ಲೆಯ ಕಾಫಿ ಬೆಳೆಗಾರರಿಗೂ ಉಚಿತ ವಿದ್ಯುತ್‌ ನೀಡಬೇಕು

* ತುಮಕೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಸ್ಥಗಿತಗೊಳಿಸಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT