ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಕಾಲುವೆ ಒತ್ತುವರಿ ಆರೋಪ: ಸ್ಯಾಮಿಸ್‌ಗೆ ನೋಟಿಸ್‌

Published 15 ಮೇ 2024, 16:12 IST
Last Updated 15 ಮೇ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ತಾಲ್ಲೂಕಿನ ಹೊಸಹಳ್ಳಿಯ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗದಲ್ಲಿ 'ಸ್ಯಾಮಿಸ್‌ ಡ್ರೀಮ್‌ ಲ್ಯಾಂಡ್‌’ ರಿಯಲ್‌ ಎಸ್ಟೇಟ್‌ ಸಂಸ್ಥೆಯು ರಾಜಕಾಲುವೆ ಒತ್ತುವರಿ ಮಾಡಿ ಬಡಾವಣೆ ಅಭಿವೃದ್ಧಿಪಡಿಸಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಹೊಸಹಳ್ಳಿಯ ಕೆ.ಕೆಂಪಣ್ಣ ಸೇರಿದಂತೆ 21 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಆರ್‌.ದೇವದಾಸ್‌ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ಉಪ ವಲಯದ ಉಪ ವಿಭಾಗಾಧಿಕಾರಿ, ಯಲಹಂಕ ತಹಶೀಲ್ದಾರ್‌, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಮತ್ತು ‘ಸ್ಯಾಮಿಸ್‌ ಡ್ರೀಮ್‌ ಲ್ಯಾಂಡ್‌ ಪ್ರೈವೇಟ್‌ ಲಿಮಿಟೆಡ್‌’ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದೆ.

ಪ್ರಕರಣವೇನು?: ‘ಹೊಸಹಳ್ಳಿಯ ವಿವಿಧ ಸರ್ವೆ ನಂಬರ್‌ಗಳಲ್ಲಿ ಹಾದು ಹೋಗಿರುವ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗಗಳನ್ನು ಮುಚ್ಚಿ ಬಡಾವಣೆ ಅಭಿವೃದ್ಧಿಪಡಿಸಲಾಗಿದೆ. ಈ ಒತ್ತುವರಿ ತೆರವುಗೊಳಿಸಲು ಕೋರಿ ರಾಜ್ಯ ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರಗಳಿಗೆ 2024ರ ಏಪ್ರಿಲ್ 12 ಹಾಗೂ ಮಾರ್ಚ್ 5ರಂದು ಮನವಿ ಸಲ್ಲಿಸಲಾಗಿದೆ. ಆದರೆ, ಒತ್ತುವರಿ ತೆರವರಿಗೆ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

‘ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗ ಜಾಗದಲ್ಲಿ ಬಡಾವಣೆ ಅಭಿವೃದ್ಧಿಪಡಿಸಲು ನೀಡಲಾಗಿರುವ ಅನುಮೋದನೆ ರದ್ದುಪಡಿಸಬೇಕು ಮತ್ತು ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT