ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಾ ವೆಂಕಟಪ್ಪ ನಾಯಕ ನಿಧನ: ಖರ್ಗೆ, ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Published 25 ಫೆಬ್ರುವರಿ 2024, 10:21 IST
Last Updated 25 ಫೆಬ್ರುವರಿ 2024, 10:21 IST
ಅಕ್ಷರ ಗಾತ್ರ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರದ ಹಾಲಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.

ಅವರಿಗೆ 67 ವರ್ಷ ವಯಸ್ಸಾಗಿತ್ತು. 

ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸುರಪುರ ಶಾಸಕ ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂತಾಪ ಸೂಚಿಸಿದ್ದಾರೆ.

ಕುಟಂಬ ವರ್ಗದವರಿಗೆ ಕಳಿಸಿರುವ ತಮ್ಮ ಸಂತಾಪ ಸೂಚನಾ ಪತ್ರದಲ್ಲಿ ಶ್ರೀಯುತರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿರುವ ಖರ್ಗೆ ಅವರು, ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ತುಂಬಲಾಗದ ನಷ್ಟವಾಗಿದೆ ಎಂದಿದ್ದಾರೆ.

ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ.

ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಸುರಪುರ ಮತಕ್ಷೇತ್ರದ ಹಿರಿಯ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಹಿರಿಯ ರಾಜಕಾರಣಿ ರಾಜಾವೆಂಕಟಪ್ಪ ನಾಯಕರು ಜನಾನುರಾಗಿಗಳಾಗಿ, ಸಮಾಜಮುಖಿಯಾಗಿ ರಾಜಕೀಯ ರಂದದಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ, ಶ್ರೀಯುತರ ಕುಟುಂಬ ವರ್ಗಕ್ಕೆ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.

ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು.

ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದ ಸಂಗತಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥಿಸುವೆ ಎಂದು ಬಿಜೆಪಿ ನಾಯಕ ಅಶ್ವತ್ಥ್‌ನಾರಾಯಣ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT