ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ: ‘ಕೈ’ ಶಾಸಕರು ಹಿಲ್ಟನ್ ಹೋಟೆಲ್‌ಗೆ

Published 23 ಫೆಬ್ರುವರಿ 2024, 20:15 IST
Last Updated 23 ಫೆಬ್ರುವರಿ 2024, 20:15 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 27ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ತಮ್ಮ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ನಾಲ್ಕು ಸ್ಥಾನಗಳಲ್ಲಿ ಶಾಸಕರ ಸಂಖ್ಯಾ ಬಲದಲ್ಲಿ ಕಾಂಗ್ರೆಸ್‌ ಮೂರು, ಬಿಜೆಪಿ ಒಂದು ಸ್ಥಾನ ಗೆಲ್ಲುವುದು ಬಹುತೇಕ ಖಚಿತ. ಈ ಮಧ್ಯೆ, ಐದನೇ ಅಭ್ಯರ್ಥಿಯಾಗಿ ಜೆಡಿಎಸ್‌ನ ಡಿ. ಕುಪೇಂದ್ರ ರೆಡ್ಡಿ ಕಣದಲ್ಲಿರುವುದರಿಂದ ಕಾಂಗ್ರೆಸ್‌ ನಾಯಕರಿಗೆ ಅಡ್ಡ ಮತದಾನ ಭೀತಿ ಎದುರಾಗಿದೆ. ಹೀಗಾಗಿ, ಶಾಸಕರನ್ನು ಹೋಟೆಲ್‌ನಲ್ಲಿ ಹಿಡಿದಿಡಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.  

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಮಾನ್ಯತಾ ಟೆಕ್‌ಪಾರ್ಕ್‌ ಆವರಣದಲ್ಲಿರುವ ಹಿಲ್ಟನ್ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ. ಅಲ್ಲಿ ಅಣಕು ಮತದಾನ ನಡೆಸುತ್ತೇವೆ’ ಎಂದರು.

‘ನಮ್ಮ ಜೊತೆ ಒಟ್ಟು 138 ಶಾಸಕರು (ಕಾಂಗ್ರೆಸ್‌ನ 135, ಸಹಸದಸ್ಯರಾಗಿರುವ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್‌ ಪುಟ್ಟಣ್ಣಯ್ಯ) ಇದ್ದಾರೆ. ಕೆಆರ್‌ಆರ್‌ಪಿಯ ಜನಾರ್ದನ ರೆಡ್ಡಿ ಅವರ ಬಳಿಯೂ ಮತ ಹಾಕುವಂತೆ ಮನವಿ ಮಾಡುತ್ತೇನೆ. ನಮ್ಮ ಬಳಿ ಹೆಚ್ಚುವರಿ ಮತಗಳಿವೆ’ ಎಂದರು.

‘ನಮ್ಮ ಮನೆಯನ್ನು ಎಷ್ಟು ಬಿಗಿ ಮಾಡಿಕೊಳ್ಳಬೇಕೊ ಅದನ್ನು ಮಾಡುತ್ತೇವೆ. ಇತರೆ ಪಕ್ಷದ ಶಾಸಕರೂ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಅವರು ಯಾರೆಂದು ಈ ಬಹಿರಂಗಪಡಿಸುವುದಿಲ್ಲ. ಅವರ ಜೀವನ ಹಾಳು ಮಾಡಲು ನನಗೆ ಇಷ್ಟವಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT