ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡ ಪತ್ರ; ಸಿದ್ದರಾಮಯ್ಯ ಸ್ವಾಗತ

Published 25 ಸೆಪ್ಟೆಂಬರ್ 2023, 10:04 IST
Last Updated 25 ಸೆಪ್ಟೆಂಬರ್ 2023, 10:04 IST
ಅಕ್ಷರ ಗಾತ್ರ

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ.

‘ನೈರುತ್ಯ ಮುಂಗಾರು ಈ ಬಾರಿ ರಾಜ್ಯದಲ್ಲಿ ಸಮರ್ಪಕವಾಗಿ ಆಗಿಲ್ಲ. ಹೀಗಾಗಿ 123 ವರ್ಷಗಳಲ್ಲೇ ಅತಿ ಕಡಿಮೆ ಮಳೆ ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ದಾಖಲಾಗಿದೆ. ಇದರಿಂದ ರಾಜ್ಯದಲ್ಲಿ ಬರದ ಸ್ಥಿತಿ ನಿರ್ಮಾಣವಾಗಿದೆ. ನದಿಯ ಕೆಳಪಾತ್ರದಲ್ಲಿರುವ ತಮಿಳುನಾಡುಗೆ ಅಗತ್ಯವಿರುವ ನೀರನ್ನು ರಾಜ್ಯ ಸದಾ ಹರಿಸಿದೆ’ ಎಂದು ಬರೆದಿರುವ ಅವರು ಕೆ.ಆರ್.ಸಾಗರ, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳ ನೀರಿನ ಮಟ್ಟವನ್ನು ಅವರು ತಮ್ಮ ಪತ್ರದಲ್ಲಿ ಹಂಚಿಕೊಂಡಿದ್ದಾರೆ.

‘ವಾಸ್ತವದಲ್ಲಿ ತಮಿಳುನಾಡು ರಾಜ್ಯವು ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಸುರಿಯುವ ಈಶಾನ್ಯ ಮಾರುತವನ್ನು ಅವಲಂಬಿಸಿದೆ. ಆದರೆ ಕರ್ನಾಟಕದ ರೈತರಿಗೆ ನೈರುತ್ಯ ಮುಂಗಾರೇ ಆಧಾರ. ಹೀಗಾಗಿ ಸದ್ಯದ ಬರ ಪರಿಸ್ಥಿತಿಯಿಂದ ರಾಜ್ಯದ ಜನರು ಕಂಗಾಲಾಗಿದ್ದಾರೆ. ನೀರಿನ ತೀವ್ರ ಅಭಾವ ಸೃಷ್ಟಿಯಾಗಿದೆ. ಜಲಾಶಯದಲ್ಲಿ ಅಗತ್ಯವಿರುವಷ್ಟು ನೀರು ಇಲ್ಲದ ಕಾರಣ, ತಮಿಳುನಾಡಿಗೆ ಸೂಚಿಸಿದಷ್ಟು ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ’ ಎಂದು ರಾಜ್ಯದ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಹೀಗಾಗಿ ಈ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಉದ್ಭವಿಸಿರುವ ವಿವಾದ ಹಾಗೂ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆಯಲು ಮಧ್ಯಸ್ಥಿಕೆ ವಹಿಸಬೇಕು ಎಂದು ಎಚ್.ಡಿ.ದೇವೇಗೌಡ ಅವರು ಪ್ರಧಾನಿಯನ್ನು ಕೋರಿದ್ದಾರೆ. ಈ ಪತ್ರವನ್ನು ‘ಎಕ್ಸ್‌’ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಇದಕ್ಕೆ ಎಕ್ಸ್‌ ವೇದಿಕೆಯಲ್ಲೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಯಮಯ್ಯ, ‘ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ’ ಎಂದಿದ್ದಾರೆ. 

‘ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ’ ಎಂದಿದ್ದಾರೆ.

‘ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಎಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

‘ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT