ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮನೆ ಊಟ ಕೋರಿದ ದರ್ಶನ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Published 10 ಜುಲೈ 2024, 10:26 IST
Last Updated 10 ಜುಲೈ 2024, 10:26 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್, "ನನಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು" ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ದರ್ಶನ್‌ (47) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದರ್ಶನ್‌ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ ಅವರು, "ಕರ್ನಾಟಕ ಬಂದಿಖಾನೆ ಕಾಯ್ದೆ-1963ರ ಕಲಂ 30ರ ಅನುಸಾರ ವಿಚಾರಣಾಧೀನ ಕೈದಿಗಳು ಮನೆಯಿಂದ ಆಹಾರ, ಹಾಸಿಗೆ, ಬಟ್ಟೆ, ಪುಸ್ತಕ... ಇತ್ಯಾದಿ ವಸ್ತುಗಳನ್ನು ತರಿಸಿಕೊಳ್ಳಲು ಅವಕಾಶವಿದೆ. ಆದ್ದರಿಂದ, ಅನುಮತಿ ನೀಡಬೇಕು" ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠವು, 'ನಿಮ್ಮ ಕೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕಿದೆ. ನಂತರವೇ ಆದೇಶ ಮಾಡಲಾಗುವುದು" ಎಂದು ತಿಳಿಸಿದರು. ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ. ಪ್ರಸನ್ನ ಕುಮಾರ್ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದರು.

ಮನವಿ ಏನು?:

"ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ನನಗೆ ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಅತಿಸಾರ ಉಂಟಾಗಿದ್ದು ಪದೇ ಪದೇ ಭೇದಿ ಆಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿಲ್ಲ" ಎಂದು ದರ್ಶನ್ ಅರ್ಜಿಯಲ್ಲಿ ವಿವರಿಸಿದ್ದಾರೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರಾಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಮದ್ರ ಕಾರಾಗೃಹದ ಸೂಪರಿಂಟೆಂಡೆಂಟ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದರು. ತದನಂತರ 2024ರ ಜೂನ್ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃದಲ್ಲಿ ವಿಚಾರಣಾ ಕೈದಿಯಾಗಿದ್ದಾರೆ. ದರ್ಶನ್ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 302, 120ಬಿ, 201, 364, 355, 384, 143, 147, 148 ಮತ್ತು 149 ಅಡಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT