ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸಿ ಪಟ್ಟಿಯಿಂದ ಕೈಬಿಡಲು ಕೋರಿಕೆ: ನೋಟಿಸ್‌

Published 4 ಏಪ್ರಿಲ್ 2024, 22:30 IST
Last Updated 4 ಏಪ್ರಿಲ್ 2024, 22:30 IST
ಅಕ್ಷರ ಗಾತ್ರ

ಬೆಂಗಳೂರು: ‘ಲಂಬಾಣಿ (ಬಂಜಾರ), ಭೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಕರ್ನಾಟಕದ ಪರಿಶಿಷ್ಟ ಜಾತಿ (ಎಸ್ಸಿ) ಪಟ್ಟಿಯಿಂದ ಕೈಬಿಡಲು ಆದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ರಾಯಚೂರು ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್‌ ಮಿತ್ರಾ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ, ಭಾರತೀಯ ಜನಗಣತಿ ಆಯುಕ್ತ ಮತ್ತು ಪ್ರಧಾನ ರಿಜಿಸ್ಟ್ರಾರ್‌, ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಕಾರ್ಯದರ್ಶಿ, ಕೇಂದ್ರ ಚುನಾವಣಾ ಆಯೋಗದ ಆಯುಕ್ತ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 26ಕ್ಕೆ ಮುಂದೂಡಿದೆ.

ಆಕ್ಷೇಪ: ‘ಸ್ಪೃಶ್ಯ ಜಾತಿಗಳಾಗಿರುವ ಹಾಗೂ ಪರಿಶಿಷ್ಟ ಜಾತಿಗಳಲ್ಲದ ಲಂಬಾಣಿ (ಬಂಜಾರ) ಕೊರಮ, ಕೊರಚ ಮತ್ತು ಭೋವಿ ಜಾತಿಗಳನ್ನು ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಸಂವಿಧಾನದ 14, 16, 17 46, 243 (ಝಡ್‌), 330, 332, 341 ಮತ್ತು 366ನೇ ವಿಧಿಗಳ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT