ಬೆಂಗಳೂರು: ರಾಜ್ಯದಲ್ಲಿ 7,100 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವ ಸಲ್ಲಿಸುವಂತೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.
ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಬುಧವಾರ ನಡೆಸಿದ ಸಚಿವರು, ಗ್ರಾಮೀಣ ರಸ್ತೆಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ಪ್ರಸ್ತುತ 7,100 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂಬಂಧ ವಿಸ್ತೃತವಾದ ಪ್ರಸ್ತಾವ ಸಲ್ಲಿಸಿ, ಅನುಮೋದನೆ ಪಡೆಯುವಂತೆ ಸಚಿವರು ಸೂಚಿಸಿದರು.
ರಾಜ್ಯದ ವಿವಿಧೆಡೆ ಕಳಪೆ ಕಾಮಗಾರಿ ನಡೆಸಿರುವ ಆರು ಮಂದಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆಯೂ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಟ್ಟಡಕ್ಕೆ ಅನುದಾನ: ಸ್ವಂತ ಕಟ್ಟಡವಿಲ್ಲದ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ₹ 20 ಲಕ್ಷ ಅನುದಾನ ಒದಗಿಸಲಾಗುವುದು. ಅದನ್ನು ಬಳಸಿಕೊಂಡು ಕಟ್ಟಡ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಆಯಾ ಗ್ರಾಮ ಪಂಚಾಯಿತಿಯ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಕಟ್ಟಡ ನಿರ್ಮಾಣ ಮಾಡಬೇಕು. ಭವಿಷ್ಯದ ದಿನಗಳಿಗೆ ಅನುಕೂಲವಾಗುವಂತೆ ಕಟ್ಟಡದ ವಿನ್ಯಾಸ ಮಾಡಬೇಕು ಎಂದರು.
ಗೋಮಾಳ ಜಮೀನುಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಗಿಡಗಳನ್ನು ನೆಟ್ಟು, ಪೋಷಿಸಬೇಕು. ಶುದ್ಧ ನೀರಿನ ಘಟಕಗಳ ನಿರ್ವಹಣೆ ಕೆಲಸವನ್ನು ಪರಿಣಿತ ಸಂಸ್ಥೆಗಳಿಗೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.