ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಶಿಷ್ಟರ ಅಭ್ಯುದಯಕ್ಕೆ ₹ 39,121 ಕೋಟಿ

Published 5 ಜುಲೈ 2024, 15:55 IST
Last Updated 5 ಜುಲೈ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: 2024-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯಡಿ (ಟಿಎಸ್‌ಪಿ) ₹39,121.46 ಕೋಟಿ ವೆಚ್ಚ ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.

ಪರಿಷತ್ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ರಾಜ್ಯ ಸರ್ಕಾರದ 34 ಇಲಾಖೆಗಳಿಗೆ ಕ್ರಿಯಾ ಯೋಜನೆಯಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಹಂಚಿಕೆ ಮಾಡಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಎಸ್‌ಸಿಎಸ್‌ಪಿ ಅಡಿ ₹ 27,673.96 ಕೋಟಿ, ಟಿಎಸ್‌ಪಿ ಅಡಿಯಲ್ಲಿ ₹ 11,447.51 ಕೋಟಿ ವ್ಯಯಿಸಲಾಗುವುದು.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹ 3,900 ಕೋಟಿ ಹೆಚ್ಚಿನ ವೆಚ್ಚ ಮಾಡಲಾಗುತ್ತದೆ’ ಎಂದರು.

‘ಅಭಿವೃದ್ಧಿ ಪರಿಷತ್‌ ಸದಸ್ಯರೂ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಅಬ್ಬಯ್ಯ ಪ್ರಸಾದ್, ಎನ್‌.ಟಿ. ಶ್ರೀನಿವಾಸ್‌, ಬಸಂತಪ್ಪ ಅವರ ಬೇಡಿಕೆಗೆ ಸ್ಪಂದಿಸಿ ಕೆಲ ಹೊಸ ಕಾರ್ಯಕ್ರಮಗಳಿಗೂ ಅನುಮೋದನೆ ನೀಡಲಾಗಿದೆ’ ಎಂದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗೆ ನಿಗದಿಪಡಿಸಿರುವ ಅನುದಾನದಲ್ಲಿ ₹ 1,327 ಕೋಟಿ ಉಳಿಯಬಹುದು ಎಂದು ಅಂದಾಜಿಸಲಾಗಿದೆ. ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಅಬ್ಬಯ್ಯ ಪ್ರಸಾದ್ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಪ್ರತಿ ಹೋಬಳಿಗೆ ಒಂದು ವಸತಿ ಶಾಲೆ ತೆರೆಯಲು ಹಿಂದೆ ತೀರ್ಮಾನಿಸಲಾಗಿತ್ತು. ಬಾಕಿ ಇರುವ ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಲಾಗುವುದು. ಅಲ್ಲಿ ಸ್ಥಳೀಯರಿಗೆ ಶೇಕಡ 75ರಷ್ಟು ಮತ್ತು ಹೊರಗಿನವರಿಗೆ ಶೇ 25ರಷ್ಟು ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದರು.

‘ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7–ಸಿ ಮತ್ತು 7–ಡಿ ರದ್ದುಗೊಳಿಸುವಂತೆ ನರೇಂದ್ರ ಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ  ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಆಯಾ ವರ್ಷದ ಅನುದಾನವನ್ನು ಅದೇ ವರ್ಷ ಬಳಕೆ ಮಾಡುವುದು ಕಡ್ಡಾಯ. ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಮೂರು ತಿಂಗಳಿಗೊಮ್ಮೆ ಪರಿಷತ್‌ ಸಭೆ ನಡೆಸಿ ಪ್ರಗತಿ ಪರಿಶೀಲಿಸಲಾಗುವುದು ಎಂದರು.

ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮತ್ತು ಪರಿಷತ್ ಸದಸ್ಯರಾಗಿರುವ ಶಾಸಕರು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT