ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿಗಳಿಂದ ಪರಿಶಿಷ್ಟರ ನಿಧಿ ದುರ್ಬಳಕೆ: ಶೀಘ್ರ ಸಭೆ ಎಂದ ಗೋವಿಂದ ಕಾರಜೋಳ

Last Updated 24 ಮಾರ್ಚ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಮೂಲಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಅಗತ್ಯಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಲ್ಲಿ ಸರ್ಕಾರ ನೀಡುತ್ತಿರುವ ಅನುದಾನವನ್ನು ವಿಶ್ವವಿದ್ಯಾಲಯಗಳು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರವೇ ಕುಲಪತಿಗಳ ವಿಶೇಷ ಸಭೆ ಕರೆಯಲಾಗುವುದು’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

‘ವಿಶ್ವವಿದ್ಯಾಲಯವೊಂದರ ಕುಲಪತಿ ₹ 7 ಕೋಟಿಯನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿರುವ ಕುರಿತು ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ರಮೇಶ್‌ ಗೌಡ ಕೇಳಿದ ಪ್ರಶ್ನೆಗೆ ಪಶುಸಂಗೋಪನೆ ಸಚಿವ ಪ್ರಭು ಚವಾಣ್‌ ಪ್ರತಿಕ್ರಿಯಿಸಿ, ಈ ಬಗ್ಗೆ ಮಾಹಿತಿ ಪಡೆದು ಉತ್ತರಿಸುತ್ತೇನೆ’ ಎಂದರು.

ಆಗ ಕಾರಜೋಳ, ‘ಇದು ಕೇವಲ ಒಂದು ವಿಶ್ವವಿದ್ಯಾಲಯದ ಸಮಸ್ಯೆಯಲ್ಲ. ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಹೀಗೆ ಆಗುತ್ತಿದೆ’ ಎಂದರು.

ರಾಜ್ಯದ ವಿವಿಧ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್‌.ಸಿ, ಎಸ್‌.ಟಿ ವಿದ್ಯಾರ್ಥಿಗಳಿಗೆ ವಸತಿ ನಿಲಯ, ಪಠ್ಯಪುಸ್ತಕ ಸೇರಿದಂತೆ ಮೂಲಸೌಕರ್ಯ ಒದಗಿಸಲು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಿಂದ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ, ಒಂಬತ್ತು ವಿಶ್ವವಿದ್ಯಾಲಯಗಳು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಬಂದಿರುವ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿವೆ. ಎಸ್‌.ಸಿ, ಎಸ್‌.ಟಿ ವಿದ್ಯಾರ್ಥಿಗಳ ಸೌಲಭ್ಯಕ್ಕಾಗಿ ನೀಡಿರುವ ಅನುದಾನವನ್ನು ಕುಲಪತಿಗಳ ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಳ್ಳಲು ಅವಕಾಶ ಇಲ್ಲ’ ಎಂದರು.

ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ‘ಅನ್ಯ ಉದ್ದೇಶಕ್ಕೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣ ಬಳಸಿಕೊಂಡವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಅವಕಾಶವಿದೆ. ಸರ್ಕಾರ ಶೀಘ್ರ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT