ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನಿಗಾಗಿ ರೇವಣ್ಣ ಕೋರ್ಟ್‌ಗೆ ಮೊರೆ

Published 2 ಮೇ 2024, 19:36 IST
Last Updated 2 ಮೇ 2024, 19:36 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ಎಚ್‌.ಡಿ.ರೇವಣ್ಣ ಸಲ್ಲಿಸಿದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ರೇವಣ್ಣ ಪರ ಹೈಕೋರ್ಟ್‌ನ ಹಿರಿಯ ವಕೀಲ ಮೂರ್ತಿ ಡಿ.ನಾಯಕ್‌ ಹಾಜರಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿದರು. ’ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಎಸ್ಐಟಿ, ಭಾರತೀಯ ದಂಡ ಸಂಹಿತೆ–1860ರ ಕಲಂ 376 (ಅತ್ಯಾಚಾರ ಆರೋಪ) ಅನ್ನು ಸೇರ್ಪಡೆ ಮಾಡಿದೆ.  ಪ್ರಕರಣದ ಆರೋಪಿಗಳನ್ನು ಬಂಧಿಸುವುದಾಗಿ ಇವತ್ತು(ಗುರುವಾರ) ಬೆಳಿಗ್ಗೆಯಷ್ಟೇ ಗೃಹ ಮಂತ್ರಿ ತಿಳಿಸಿದ್ದಾರೆ. ಆದ್ದರಿಂದ, ಅರ್ಜಿದಾರರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಮತ್ತು ಮಧ್ಯಂತರ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 3ಕ್ಕೆ ಮುಂದೂಡಿದರು. ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್‌ ಸಾಗರ್ ವಕಾಲತ್ತು ವಹಿಸಿದ್ದಾರೆ.

ಕಲಂ 376 ಸೇರ್ಪಡೆಗೆ ಮನವಿ: ಗುರುವಾರ ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ತಂಡವು ನಗರದ, ಉಸ್ತುವಾರಿ 32ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿ, ‘ಈಗಾಗಲೇ ಆರೋಪಿ ವಿರುದ್ಧ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣದಲ್ಲಿ ಐಪಿಸಿ ಕಲಂ 376 ಅನ್ನೂ ಸೇರ್ಪಡೆ ಮಾಡಬೇಕು’ ಎಂಬ ಮನವಿಯನ್ನು ನ್ಯಾಯಾಧೀಶರಿಗೆ ಸಲ್ಲಿಸಿದರು. ಈ ವಿಷಯ ಗೊತ್ತಾಗುತ್ತಿದ್ದಂತೆಯೇ, ರೇವಣ್ಣ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT