ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ ಸಿಬ್ಬಂದಿ ಕೊರತೆ: ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

Published 16 ಜನವರಿ 2024, 15:20 IST
Last Updated 16 ಜನವರಿ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ಎಸ್‌ಸಿ–ಎಸ್‌ಟಿ) ಬಾಲಕ–ಬಾಲಕಿಯರ ವಸತಿಗೃಹಗಳಲ್ಲಿ ಸಿಬ್ಬಂದಿ ಕೊರತೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆಳಗಾವಿಯ, ‘ತರುಣ ಭಾರತ್’ ಮರಾಠಿ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿ ಆಧರಿಸಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಕರಣದ ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ನಿತಿನ್ ರಮೇಶ್‌, ‘ವಿದ್ಯಾರ್ಥಿ ವಸತಿ ಗೃಹಗಳ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾರ್ಗಸೂಚಿ ಬಿಡುಗಡೆ ಮಾಡಿದೆ’ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಮಾರ್ಗಸೂಚಿಗಳ ಪ್ರಸ್ತಾವಗಳ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂಬುದನ್ನು ತಿಳಿಸಿ. ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ತ್ವರಿತ ಪ್ರಕ್ರಿಯೆ ಪ್ರಾರಂಭಿಸಿ ಆರು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಕಳೆದ ವರ್ಷವಷ್ಟೇ ಆದೇಶಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಗಮನ ಹರಿಸಬೇಕು’ ಎಂದು ಸರ್ಕಾರದ ಪರ ವಕೀಲರಿಗೆ ತಾಕೀತು ಮಾಡಿ ವಿಚಾರಣೆಯನ್ನು ಎರಡು ವಾರ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT