ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ

Published 22 ಆಗಸ್ಟ್ 2023, 16:26 IST
Last Updated 22 ಆಗಸ್ಟ್ 2023, 16:26 IST
ಅಕ್ಷರ ಗಾತ್ರ

ಬೆಂಗಳೂರು: ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಮಂಗಳವಾರ ನಡೆಯಿತು.

ವನ್ಯಜೀವಿ (ಸಂರಕ್ಷಣಾ) ಕಾಯ್ದೆಗೆ ಇತ್ತೀಚೆಗೆ ತಂದ ತಿದ್ದುಪಡಿ ಅನ್ವಯ ಸ್ಥಾಯಿ ಸಮಿತಿ ರಚನೆಯಾಗಲಿದ್ದು, ಹೊಸ ಸಂರಕ್ಷಿತ ಪ್ರದೇಶಗಳ ಆಯ್ಕೆ ಮತ್ತು ನಿರ್ವಹಣೆ, ಸಸ್ಯ ಮತ್ತು ಪ್ರಾಣಿ ಸಂಕುಲವನ್ನು ಕಾಪಾಡುವ ಜೊತೆಗೆ, ಮಂಡಳಿ ವಹಿಸುವ ಕೆಲಸವನ್ನು ಈ ಸಮಿತಿ ಮಾಡಲಿದೆ.

ವನ್ಯಜೀವಿ ಮಂಡಳಿ ಸಭೆಗೆ ಮಂಡನೆಯಾಗುವ ಕೆಲವು ಪ್ರಸ್ತಾವನೆಗಳಿಗೆ ಪರ– ವಿರೋಧ ಅಭಿಪ್ರಾಯ ವ್ಯಕ್ತವಾಗಿ, ಒಮ್ಮತಕ್ಕೆ ಬರಲು ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು, ಕೂಲಂಕಷವಾಗಿ ಪರಿಶೀಲಿಸಿದ ನಂತರ ಮಂಡಳಿಯ ಸಭೆಗೆ ಶಿಫಾರಸು ಮಾಡುವ ಕೆಲಸವನ್ನು ಸ್ಥಾಯಿ ಸಮಿತಿಗೆ ವಹಿಸಲಾಗುವುದು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ತಿಳಿಸಿದರು.

ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಯಲ್ಲಿ ವನ್ಯಜೀವಿ ಧಾಮದಿಂದ ಕರ್ನಾಟಕವು ನೀರು ಕೊಂಡೊಯ್ಯುತ್ತಿದೆ ಎಂದು ಗೋವಾ ಆರೋಪಿಸಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕೊಂಡೊಯ್ಯಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಹದಾಯಿ ಯೋಜನೆ ಅನುಷ್ಠಾನಕ್ಕೆ 26.92 ಹೆಕ್ಟೇರ್‌ ಅರಣ್ಯ ಅತ್ಯಗತ್ಯವಾಗಿದೆ. ಆದರೆ, ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ಗೋವಾ ಆಕ್ಷೇಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT