ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳ | 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: ಸಿಎಂ ಸಿದ್ದರಾಮಯ್ಯ ಭರವಸೆ

ಹಿಂದುಳಿದ, ದಲಿತ ಸ್ವಾಮೀಜಿಗಳ ಸಭೆಯಲ್ಲಿ ಸಿದ್ದರಾಮಯ್ಯ ಭರವಸೆ
Published 7 ಜೂನ್ 2023, 5:04 IST
Last Updated 7 ಜೂನ್ 2023, 5:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ ಎಂದರು.

ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧವನ್ನು ಬಿಜೆಪಿ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೇ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ಎಚ್ಚರದಿಂದ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಲಿದೆ’ ಎಂದೂ ಅವರು ಭರವಸೆ ನೀಡಿದರು.

ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಭೋವಿಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಗಾಣಿಗ ಗುರುಪೀಠದ ಬಸವಕುಮಾರ ಸ್ವಾಮೀಜಿ, ಛಲವಾದಿ ಗುರುಪೀಠದ ನಾಗಿದೇವ ಸ್ವಾಮೀಜಿ, ಶಿವಶರಣ ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಅಂಬಿಗರ ಚೌಡಯ್ಯ, ತೆಲಸಂಗ ಕುಂಬಾರ ಗುರುಪೀಠದ ಕುಂಬಾರ ಗುಂಡಯ್ಯ ಸ್ವಾಮೀಜಿ, ಯಾದವ ಮಹಾಸಂಸ್ಥಾನದ ಕೃಷ್ಣ ಯಾದವಾನಂದ ಸ್ವಾಮೀಜಿ, ಮೇದಾರ ಕೇತೇಶ್ವರ ಗುರುಪೀಠದ ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಬೆಂಗಳೂರು ರಾಮಾನುಜ ಮಠದ ತ್ರಿದಂಡಿ ವೇಂಕಟ ರಾಮಾನುಜ ಜೀಯರ್ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT