ಬೆಂಗಳೂರು: ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಅವರ ವಿರುದ್ಧ ಕ್ರಮಕ್ಕೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ, ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಶನಿವಾರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು, ಬಿಜೆಪಿ–ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳಲ್ಲಿ ಅನುಮತಿ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಮಾಜಿ ಸಂಸದ ವೀರಪ್ಪ ಮೊಯಿಲಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಬಳಿಕ, ಮುಖ್ಯಮಂತ್ರಿ ಅವರನ್ನು ಹೊರತುಪಡಿಸಿ ಉಳಿದವರು ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು.
ರಾಜ್ಯಪಾಲರ ನಡೆಗೆ ಆಕ್ಷೇಪ: ‘ನೀವು ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿರುವುದು ಕಂಡುಬರುತ್ತಿದೆ. ನಿಮ್ಮ ಪ್ರತಿ ನಡೆ ಸಾಂವಿಧಾನಿಕ, ಸಂಸದೀಯ ಆಡಳಿತಕ್ಕೆ ಧಕ್ಕೆ ತರುತ್ತಿದೆ. ರಾಜ್ಯಪಾಲ ಕಚೇರಿಯ ಗೌರವಕ್ಕೆ ದೊಡ್ಡ ಚ್ಯುತಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ತೀರ್ಮಾನ ಕೈಗೊಂಡಿದ್ದೀರಿ. ಆದರೆ, ಎಚ್.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ ವಿರುದ್ಧ ತನಿಖೆಗೆ ಅನುಮತಿ ಕೋರಿದ ಅರ್ಜಿ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಿಮ್ಮ ಈ ನಡೆ ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿದೆ’ ಎಂದು ಪತ್ರದಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
‘ಕರ್ತವ್ಯ ನಿರ್ವಹಣೆಯಲ್ಲಿ ನೀವು ಪಾರದರ್ಶಕತೆ ತೋರಬೇಕು. ಸಂವಿಧಾನ ಬದ್ಧವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರದ ಆಡಳಿತದಲ್ಲಿ ಮಧ್ಯಪ್ರವೇಶಿಸುವುದನ್ನು ನಿಲ್ಲಿಸಬೇಕು. ಸದನ ಅನುಮೋದಿಸಿದ ಮಸೂದೆಗಳಿಗೆ ತಕ್ಷಣ ಅಂಕಿತ ಹಾಕಬೇಕು. ಅವುಗಳನ್ನು ನೀವು ಗಂಭೀರವಾಗಿ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದ ತತ್ವ ಸಿದ್ಧಾಂತಗಳನ್ನು ಎತ್ತಿಹಿಡಿಯಲು ವಿಫಲರಾದರೆ ರಾಜ್ಯದ ಜನರು ಸಹಿಸಲ್ಲ. ರಾಜಕೀಯ ತಾರತಮ್ಯವಿಲ್ಲದೇ ನೀವು ಕರ್ತವ್ಯ ನಿರ್ವಹಿಸಿ’ ಎಂದೂ ಆಗ್ರಹಿಸಿದೆ.
ರಾಜ್ಯಪಾಲರ ವಿರುದ್ಧ ಧಿಕ್ಕಾರ: ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಕೇಂದ್ರದ ಚುಕ್ಕಾಣಿಯಂತೆ, ಬಿಜೆಪಿ ಏಜೆಂಟರಂತೆ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾತಾಂತ್ರಿಕವಾಗಿ ಚುನಾಯಿತ ಸರ್ಕಾರವನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಮತ್ತು ರಾಜಭವನ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ಪರವಾಗಿ ನಾವು ರಾಜಭವನ ಚಲೋ ಮಾಡುತ್ತಿಲ್ಲ. ಅವರ ವಿರುದ್ಧದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯಪಾಲರ ಕಚೇರಿ ದುರುಪಯೋಗ ಆಗುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ’ ಎಂದರು.
‘ರಾಜ್ಯಪಾಲರು ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು’ ಎಂದೂ ಹೇಳಿದರು.
ರಾಜಭವನವನ್ನು ದುರುಪ ಯೋಗ ಮಾಡಿಕೊಂಡು ಬಿಜೆಪಿಯೇತರ ಸರ್ಕಾರಗಳನ್ನು ಅಭದ್ರಗೊಳಿಸುವ ಕುತಂತ್ರ ಬುದ್ಧಿ ಯನ್ನು ಕೇಂದ್ರ ಸರ್ಕಾರ ನಿಲ್ಲಿಸದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆಸಿದ್ದರಾಮಯ್ಯ, ಮುಖ್ಯಮಂತ್ರಿ
‘ನನ್ನ ಬಳಿ ಯಾವುದೇ ಪ್ರಕರಣಗಳು ಬಾಕಿ ಇಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ಏಕೆ ಹೀಗೆ ಹೇಳುತ್ತಿದ್ದಾರೆಂದು ಪರಿಶೀಲಿಸುತ್ತೇವೆ. ಅವರು ಸ್ಪಷ್ಟನೆ ಕೇಳಿದ್ದರೆ ಅದನ್ನೂ ಪರಿಶೀಲಿಸುತ್ತೇವೆ. ರಾಜ್ಯಪಾಲರು ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲೇಬೇಕು. ಅವರ ಬಳಿ ಪರ್ಯಾಯ ದಾರಿಗಳಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಆ ಹುದ್ದೆಗೆ ಇರುವ
ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ’ ಎಂದೂ ಹೇಳಿದರು.
ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.
ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.