ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ಇರಲಿ: ಸಿಎಂ ಸಿದ್ದರಾಮಯ್ಯ

Published 17 ಅಕ್ಟೋಬರ್ 2023, 8:28 IST
Last Updated 17 ಅಕ್ಟೋಬರ್ 2023, 8:28 IST
ಅಕ್ಷರ ಗಾತ್ರ

ಬೆಂಗಳೂರು: ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಹೊರ ರಾಜ್ಯಗಳ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಜತೆ ವ್ಯವಹರಿಸುವಾಗ ಅನಿವಾರ್ಯವಾಗಿ ಇಂಗ್ಲಿಷ್ ಬಳಸಬೇಕಾಗುತ್ತದೆ. ರಾಜ್ಯ ಸರ್ಕಾರದ ಒಳಗಿನ ಆಡಳಿತ ವ್ಯವಹಾರಗಳಲ್ಲಿ ಇಂಗ್ಲಿಷ್ ಬಳಕೆ ಅನಗತ್ಯ. ಆ ರೀತಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದು, ಕಡತ ಮಂಡಿಸುವುದನ್ನು ಕೈಬಿಟ್ಟು ಸಂಪೂರ್ಣವಾಗಿ ಕನ್ನಡ ಬಳಕೆ ಮಾಡಬೇಕು ಎಂದರು.

ಇತರ ಭಾಷೆ, ಧರ್ಮಗಳನ್ನೂ ಪ್ರೀತಿಸಬೇಕು. ಆದರೆ, ಕನ್ನಡವನ್ನೇ ಹೆಚ್ಚು ಬಳಕೆ ಮಾಡಬೇಕು. ಕನ್ನಡವನ್ನು ಮತ್ತಷ್ಟು ಸಮೃದ್ಧಗೊಳಿಸುವ ಕೆಲಸ ಮಾಡಬೇಕು. ಇತರ ಭಾಷೆಗಳ ಬಗೆಗಿನ ಉದಾರತೆಯು ಕನ್ನಡಕ್ಕೆ ತೊಂದರೆ ಉಂಟುಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಉಪ‌ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್, ಕಾನೂನು ಸಚುವ ಎಚ್.ಕೆ. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.

ರವಿರಾಜ್ ಜಿ. ಹುಲಗೂರು ಅವರು ರಚಿಸಿರುವ ಲಾಂಛನವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ರವಿರಾಜ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹25,000 ನಗದು ಬಹುಮಾನ ನೀಡಲಾಯಿತು. ಬಿಬಿಎಂಪಿ ವತಿಯಿಂದ ₹ 1 ಲಕ್ಷ ನೀಡುವುದಾಗಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT