ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅ.5ರವರೆಗೆ ಎಸ್‌ಐಟಿ ವಶಕ್ಕೆ ಶಾಸಕ ಮುನಿರತ್ನ

Published : 24 ಸೆಪ್ಟೆಂಬರ್ 2024, 15:34 IST
Last Updated : 24 ಸೆಪ್ಟೆಂಬರ್ 2024, 15:34 IST
ಫಾಲೋ ಮಾಡಿ
Comments

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 5ರವರೆಗೆ ಸಿಐಡಿಯ ವಿಶೇಷ ತನಿಖಾ ದಳದ (ಎಸ್‌ಐಟಿ) ವಶಕ್ಕೆ ನೀಡಿ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಆದೇಶದ ಬೆನ್ನಲ್ಲೇ ಮುನಿರತ್ನ ಅವರನ್ನು ಎಸ್ಐಟಿ ಕಸ್ಟಡಿಗೆ ಪಡೆದುಕೊಂಡಿತು. 

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಮುನಿರತ್ನ ಅವರು ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣವೂ ಸೇರಿದಂತೆ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನೂ ಎಸ್‌ಐಟಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು.

‘ಮೂರು ಪ್ರಕರಣಗಳ ವಿಚಾರಣೆಗಾಗಿ ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದೆ. ಸಿಐಡಿ (ಆರ್ಥಿಕ ಅಪರಾಧಗಳು) ಎಡಿಜಿಪಿ ಬಿ.ಕೆ.ಸಿಂಗ್‌ ನೇತೃತ್ವದ ಎಸ್‌ಐಟಿ ತಂಡವು ಮುನಿರತ್ನ ಅವರ ವಿಚಾರಣೆ ನಡೆಸಲಿದೆ’ ಎಂದು ಮೂಲಗಳು ತಿಳಿಸಿವೆ.

‘ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಅ.5ರ ವರೆಗೆ ಆರೋಪಿಯನ್ನು ವಿಚಾರಣೆ ನಡೆಸಲು ನ್ಯಾಯಾಲಯವು ಅವಕಾಶ ನೀಡಿದೆ. ಸಿಐಡಿ ಕಚೇರಿಯಲ್ಲೇ ಆರೋಪಿಗೆ ಪ್ರಶ್ನೆಗಳನ್ನು ಕೇಳಿ, ಹೇಳಿಕೆ ದಾಖಲು ಮಾಡಿಕೊಳ್ಳಲಾಗುವುದು. ಅಲ್ಲದೇ ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT