ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17,850 ಧ್ವನಿವರ್ಧಕಗಳಿಗೆ ರಾಜ್ಯ ಸರ್ಕಾರ ಅನುಮತಿ

Last Updated 21 ಅಕ್ಟೋಬರ್ 2022, 20:31 IST
ಅಕ್ಷರ ಗಾತ್ರ

ಬೆಂಗಳೂರು: 10,889 ಮಸೀದಿಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 17,850 ಧ್ವನಿವರ್ಧಕಗಳ ಬಳಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಧ್ವನಿವರ್ಧಕಗಳ ಬಳಕೆ ನಿಯಂತ್ರಣ ನಿಯಮಗಳ ಅಡಿಯಲ್ಲಿ ಪರವಾನಗಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಮೇ 10ರಂದು ಗೃಹ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಅರ್ಜಿಗಳ ಪರಿಶೀಲನೆ ಪೂರ್ಣಗೊಳಿಸಿರುವ ಗೃಹ ಇಲಾಖೆ, ದೇವಸ್ಥಾನಗಳು, ಮಸೀದಿಗಳು, ಚರ್ಚ್‌ಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಿದೆ.

ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಿದ್ದು, ₹ 450 ಶುಲ್ಕ ವಿಧಿಸಲಾಗಿದೆ. ಗೃಹ ಇಲಾಖೆ ಒದಗಿಸಿರುವ ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಅತ್ಯಧಿಕ 1,841 ಪರವಾನಗಿಗಳನ್ನು ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ 744 ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಇದು ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯ ಮಸೀದಿಗಳು ಪರವಾನಗಿ ಪಡೆದ ಜಿಲ್ಲೆಯಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗಿನ ಅವಧಿಯಲ್ಲಿ ಮಸೀದಿಗಳಲ್ಲೂ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬಾರದು ಎಂದು ಬಜರಂಗ ದಳ, ಶ್ರೀರಾಮ ಸೇನೆ ಸೇರಿದಂತೆ ಹಿಂದುತ್ವ ಪರ ಸಂಘಟನೆಗಳು ಪಟ್ಟು ಹಿಡಿದಿದ್ದವು. ಮಸೀದಿಗಳಲ್ಲಿ ಆಝಾನ್‌ ಕೂಗುವುದಕ್ಕೆ ಪ್ರತಿಯಾಗಿ ಕೆಲವೆಡೆ ದೇವಸ್ಥಾನಗಳಲ್ಲಿ ಹನುಮಾನ್‌ ಚಾಲೀಸಾ ಪಠಣವನ್ನೂ ಆರಂಭಿಸಿದ್ದರು.

ಮೇ 10ರಂದು ಸುತ್ತೋಲೆ ಹೊರಡಿಸಿದ್ದ ಗೃಹ ಇಲಾಖೆ, ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯಗೊಳಿಸಿತ್ತು. ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯ ಪ್ರಕಾರ ನಿಗದಿತ ಪ್ರಮಾಣದ ಶಬ್ಧದ ಮಿತಿಯನ್ನೂ ಜಾರಿಗೊಳಿಸುವಂತೆ ಸೂಚಿಸಿತ್ತು.

‘ಮಸೀದಿಗಳಲ್ಲಿ ನಿಯಮ ಪಾಲಿಸುತ್ತಿಲ್ಲ ಎಂಬುದು ನಮ್ಮ ಆಕ್ಷೇಪಕ್ಕೆ ಕಾರಣವಾಗಿತ್ತು. ಈಗ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಿರುವುದನ್ನು ಸರ್ಕಾರದ ವೈಫಲ್ಯ ಎಂದು ವ್ಯಾಖ್ಯಾನಿಸಲು ಆಗದು. ಅನುಮತಿ ಪಡೆದ ಬಳಿಕವೂ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯಂತೆ ಮಿತಿಯಲ್ಲಿ ಧ್ವನಿವರ್ಧಕ ಬಳಸುತ್ತಿರುವುದನ್ನೂ ಖಾತರಿಪಡಿಸಬೇಕು ಎಂಬುದು ನಮ್ಮ ಬೇಡಿಕೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

‘ಯಾವುದೇ ತಾರತಮ್ಯವಿಲ್ಲದೆ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಆದರೆ, ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಈ ಕುರಿತು ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ’ ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT