ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿಯಲ್ಲಿ ಎಲ್‌ಕೆಜಿ–ಯುಕೆಜಿ ಪ್ರಾರಂಭಿಸಿ: ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ

ಗುಣಮಟ್ಟದ ಆಹಾರ ಪೂರೈಕೆ; ಗೌರವ ಧನ ಹೆಚ್ಚಿಸಲು ಆಗ್ರಹ
Published 24 ಜೂನ್ 2024, 15:41 IST
Last Updated 24 ಜೂನ್ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡೆರೇಷನ್‌ (ಎಐಟಿಯುಸಿ) ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

‘ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಲ್ಲಿ ಶಿಶುಪಾಲನ ಕೇಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಕೂಸಿನ ಮನೆ ಮತ್ತು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಇತರೆ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

‘ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ಶಿಕ್ಷಣಕ್ಕೆ ನೀಡುವುದಕ್ಕೆ ಆದ್ಯತೆ ಕೊಡಬೇಕು. 3 ರಿಂದ 6 ವರ್ಷದ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಉತ್ತಮ ಆಟೋಪಕರಣಗಳನ್ನು ಒದಗಿಸಬೇಕು. ಮಕ್ಕಳಿಗೆ ಆರಂಭಿಕ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು’ ಎಂದು ಫೆಡರೇಷನ್‌ ಅಧ್ಯಕ್ಷ ಬಿ. ಅಮ್ಜದ್‌ ಒತ್ತಾಯಿಸಿದರು.

‘ರಾಜ್ಯದಲ್ಲಿ 46,062 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳನ್ನು ಹೊಂದಿವೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ 1,682 ಸ್ನಾತಕೋತ್ತರ ಪದವಿ, 6,365 ಪದವಿ, 15,217 ಪಿಯುಸಿ ಹಾಗೂ 32,612 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ್ದಾರೆ. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಿಸಬೇಕು’ ಎಂದು ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಒತ್ತಾಯಿಸದರು. 

‘ಕಾಂಗ್ರೆಸ್‌ ಸರ್ಕಾರ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ನೀಡಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವ ಧನ ಹೆಚ್ಚಿಸುವ ಭರವಸೆಯನ್ನು ಈಡೇರಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು’ ಎಂದು ಆಗ್ರಹಿಸಿದರು.

ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಫೆಡರೇಷನ್‌ ಉಪಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT