ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಟಿ ಪಟ್ಟಿಗೆ ಕುರುಬರು: ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

Published 20 ಜುಲೈ 2023, 16:42 IST
Last Updated 20 ಜುಲೈ 2023, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಈ ಶಿಫಾರಸು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಗುರುವಾರ(ಜುಲೈ 20) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆ ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಶಿಫಾರಸನ್ನು ಪತ್ರದ ಜೊತೆ ಲಗತ್ತಿಲಾಗಿದೆ.

ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾಸಿಸುತ್ತಿರುವ ಕಾಡು ಕುರುಬರು, ಜೇನು ಕುರುಬರು ಎಸ್‌ಟಿ ಮೀಸಲಾತಿಯ ಸೌಲಭ್ಯ ಪಡೆಯುತ್ತಿದ್ದಾರೆ. ಉಳಿದ ಕುರುಬ ಸಮುದಾಯ ಪ್ರಸ್ತುತ ರಾಜ್ಯದ 2 ‘ಎ’ ಪಟ್ಟಿಯಲ್ಲಿದೆ.

ಪರಿಶಿಷ್ಟ ಪಂಗಡದ ಮೀಸಲಾತಿಗೆ ಒತ್ತಾಯಿಸಿ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ 2022ರ ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಫೆ.7ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಿ, ಎಸ್‌ಟಿಗೆ ಸೇರಿಸುವಂತೆ ಹಕ್ಕೊತ್ತಾಯ ಮಾಡಿದ್ದರು. ಪಾದಯಾತ್ರೆಯಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

‘ಬಂಡೆ ಕುರುಬ ಸೇರಿದಂತೆ ಇತರೆ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ಇದೆ. ಅದರ ಬಗ್ಗೆಯೂ ಚರ್ಚೆ ನಡೆದಿದೆ. ನಾಲ್ಕು ಜಿಲ್ಲೆಗಳಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆದಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ನಡೆಯಬೇಕಿದೆ. ಶಿಫಾರಸು ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು  ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

‘ಕುರುಬರು ಭಾರತದ ಮೂಲ ನಿವಾಸಿಗಳು. 1868 ಮತ್ತು 1901ರ ಜನಗಣತಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿತ್ತು. ಸ್ವಾತಂತ್ರ್ಯಾ ನಂತರ ಕೈಬಿಡಲಾಗಿದೆ. ದೇವರಾಜ ಅರಸು ಆಡಳಿತದ ಅವಧಿಯಲ್ಲಿ ಜೇನು ಕುರುಬ ಮತ್ತು ಕಾಡು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದರು. ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಎಸ್‌ಟಿ ಮೀಸಲಾತಿ ಸೌಲಭ್ಯ ಸಿಗುತ್ತಿದೆ’ ಎಂದು ಕುರುಬ ಸಮುದಾಯ ಪ್ರತಿಪಾದಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT