ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿ.ಎಂ ರಾಜೀನಾಮೆಗೆ ಹೋರಾಟ: ಬಿಜೆಪಿ ಕಾರ್ಯಕಾರಿಣಿ ನಿರ್ಣಯ

Published 4 ಜುಲೈ 2024, 16:30 IST
Last Updated 4 ಜುಲೈ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಕೆಳಗಿಳಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಹೋರಾಟ ತೀವ್ರಗೊಳಿಸುವ ನಿರ್ಣಯವನ್ನು ಗುರುವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಕೈಗೊಂಡಿದೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯ ಸರ್ಕಾರ ಜನರ ಹಿತ ಕಡೆಗಣಿಸಿದೆ. ಆರ್ಥಿಕ ಶಿಸ್ತು ಇಲ್ಲವಾಗಿದೆ. ಆರ್ಥಿಕ ದಿವಾಳಿಯತ್ತ ರಾಜ್ಯ ಸಾಗುತ್ತಿದೆ. ಅಭಿವೃದ್ಧಿ ಕಡೆ ಗಮನ ಕೊಡದೇ ಅಲ್ಪಸಂಖ್ಯಾತರನ್ನು ಓಲೈಸಲು, ಮತ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಗಮನ ನೀಡಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟು ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸ್ಥಿತಿಗೆ ಕಾರಣವಾದ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರದಿಂದ ತೊಲಗಿಸಬೇಕು. ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಡ ಹಾಕಬೇಕು ಎಂಬ ನಿರ್ಣಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮಂಡಿಸಿದರು. ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಬಂಗಾರು ಹನುಮಂತು ನಿರ್ಣಯವನ್ನು ಅನುಮೋದಿಸಿದರು.

ಲೋಕಸಭಾ ಚುನಾವಣೆಯಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಐಎನ್‌ಡಿಐಎ ಅಪಪ್ರಚಾರ ನಡೆಸಿತ್ತು. ಪೊಳ್ಳು ಭರವಸೆ ಮೂಲಕ ಅಧಿಕಾರ ಪಡೆಯಲು ಯತ್ನಿಸಿತ್ತು. ಆದರೆ, ಪ್ರಜ್ಞಾವಂತ ಮತದಾರರು ಅವರ ಷಡ್ಯಂತ್ರವನ್ನು ಬೆಂಬಲಿಸಲಿಲ್ಲ. ಅವರ ಸುಳ್ಳಿನ ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ಬಿಜೆಪಿ ಸಾಧನೆಗಳನ್ನು ಮೆಚ್ಚಿ ಮೂರನೇ ಬಾರಿ ಗೆಲುವು ತಂದುಕೊಟ್ಟಿದ್ದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಅಭಿನಂದಿಸುವ ಮತ್ತೊಂದು ನಿರ್ಣಯವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಡಿಸಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ದೊಡ್ಡನಗೌಡ ಅನುಮೋದಿಸಿದರು.

‘ಮುಡಾ’ ಹಗರಣದ ಹೋರಾಟ ತೀವ್ರಗೊಳಿಸಿ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ‘ಮುಡಾ’ ಹಗರಣದ ವಿರುದ್ಧವೂ ಹೋರಾಟ ತೀವ್ರಗೊಳಿಸಬೇಕು. ಮುಖ್ಯಮಂತ್ರಿ ರಾಜೀನಾಮೆಗೆ ಪಟ್ಟುಹಿಡಿಯಬೇಕು ಎಂದು  ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್‌ ಅಗರ್‌ವಾಲ್‌ ಸೂಚಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ದಯನೀಯ ಸೋಲು ಕಂಡಿದೆ. ರಾಜ್ಯ ಸರ್ಕಾರದ ವಿರುದ್ಧ ಜನರು ಮತ ಚಲಾಯಿಸಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮತ್ತೆ ಚುನಾವಣೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ಸಾಧ್ಯವಾಗದಿದ್ದರೂ, 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮತ ಪ್ರಮಾಣವೂ ಹೆಚ್ಚಾಗಿದೆ. ಫಲಿತಾಂಶ ಕುರಿತು ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.

ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಸಚಿವರಾದ  ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಹಿರಿಯ ಮುಖಂಡ ನಿರ್ಮಲ್‍ಕುಮಾರ್‌ ಸುರಾನ, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಉಪಸ್ಥಿತರಿದ್ದರು. 

- ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ. ಈಗ ಚುನಾವಣೆ ನಡೆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ
–ಬಿ.ಎಸ್‌. ಯಡಿಯೂರಪ್ಪ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ 
ಜಿ ಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜುಗೊಳ್ಳಬೇಕು. ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಬೇಕು.
 –ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಹಿಂದೂಸ್ತಾನದ ಜನರ ಶತಮಾನ ಆರಂಭ: ಗಡ್ಕರಿ

‘ವಿಶ್ವದಲ್ಲಿ ಹಿಂದೂಸ್ತಾನದ ಜನರ ಶತಮಾನ ಆರಂಭವಾಗಲಿದೆ. ಬಿಜೆಪಿ ಹಿಂದೂಸ್ತಾನವನ್ನು ವಿಶ್ವ ಗುರು ಮಾಡುವ ಸಂಕಲ್ಪ ಮಾಡಿದೆ’ ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು. ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಮಾರೋಪದಲ್ಲಿ ಅವರು ಮಾತನಾಡಿದರು. ‘ಕೃಷಿ ಕೈಗಾರಿಕೆ ಸೇವಾ ಕ್ಷೇತ್ರಗಳನ್ನು ಬಲಪಡಿಸಬೇಕಿದೆ. ಸ್ವದೇಶಿ ಸ್ವಾವಲಂಬನೆ ಮೂಲಕ ಅಭಿವೃದ್ಧಿ ಕಡೆ ಕೇಂದ್ರ ಸರ್ಕಾರ ಗಮನ ಕೊಡುತ್ತಿದೆ. ಇದೇ ಬಿಜೆಪಿಯ ಕಾರ್ಯಸೂಚಿ’ ಎಂದರು. ‘ಬಿಜೆಪಿ ಕುಟುಂಬ ಆಧಾರಿತ ಪಕ್ಷವಲ್ಲ. ನೆಹರೂ ಅವರಿಂದ ಆರಂಭಿಸಿ ರಾಹುಲ್‌ ಗಾಂಧಿವರೆಗೆ ಕಾಂಗ್ರೆಸ್‌  ಕುಟುಂಬ ಆಧಾರಿತ ಪಕ್ಷವಾಗಿ ಕೆಲಸ ಮಾಡಿದೆ. ಇಂದಿರಾ ಗಾಂಧಿ ಅವರ ಬಡತನ ನಿರ್ಮೂಲನೆ ಘೋಷಣೆ  ಕಾಂಗ್ರೆಸ್ ಪಕ್ಷದ ಮುಖಂಡರು ಚೇಲಾಗಳ ಬಡತನವನ್ನು ದೂರ ಮಾಡಿದೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT