ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಪ್ರಶ್ನೆ ವಿವಾದ | ಕೆಇಎ ಕಚೇರಿ ಮುತ್ತಿಗೆಗೆ ಯತ್ನ: ವಿದ್ಯಾರ್ಥಿಗಳು ವಶಕ್ಕೆ

Published 22 ಏಪ್ರಿಲ್ 2024, 15:27 IST
Last Updated 22 ಏಪ್ರಿಲ್ 2024, 15:27 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದ್ದು, ಕೃಪಾಂಕ ನೀಡಬೇಕು’ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಲ್ಲೇಶ್ವರದ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿ ಎದುರು ಜಮಾಯಿಸಿದ್ದರು. ಕಚೇರಿ ಮುಂಭಾಗದಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಕೆಇಎ ವಿರುದ್ಧ ಘೋಷಣೆ ಕೂಗಿದ ವಿದ್ಯಾರ್ಥಿಗಳು, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು, ‘ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಸ್ಥಳದಿಂದ ಹೊರಟು ಹೋಗಿ’ ಎಂದರು. ಇದೇ ವಿಚಾರವಾಗಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಎಬಿವಿಪಿ ಮುಖಂಡರು ಹಾಗೂ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು, ಬಿಎಂಟಿಸಿ ಬಸ್‌ನಲ್ಲಿ ಸ್ಥಳದಿಂದ ಕರೆದೊಯ್ದು, ಕೆಲ ಗಂಟೆಗಳ ಬಳಿಕ ಎಲ್ಲರನ್ನೂ ಬಿಟ್ಟು ಕಳುಹಿಸಿದ್ದಾರೆ.

‘ಕೆಇಎ ವತಿಯಿಂದ ಏಪ್ರಿಲ್ 18 ಹಾಗೂ 19ರಂದು ಸಿಇಟಿ ನಡೆದಿದೆ. ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಹಾಗೂ ಜೀವ ವಿಜ್ಞಾನ ವಿಷಯಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ. ಪಠ್ಯಕ್ಕೆ ಅನುಗುಣವಾಗಿ ತಯಾರಿ ನಡೆಸಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಕೆಇಎ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಚುನಾವಣೆಗೆ ಹೆಚ್ಚು ಒತ್ತು ನೀಡಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತಿಸುತ್ತಿಲ್ಲ. ಅಧಿಕಾರಿಗಳು ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿದ್ದಾರೆ. ಅವೈಜ್ಞಾನಿಕವಾಗಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಬರೆದಿರುವ ಎಲ್ಲರಿಗೂ ಕೃಪಾಂಕ ನೀಡಬೇಕು’ ಎಂದು ಒತ್ತಾಯಿಸಿದರು.

ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಗೆ ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು – ಪ್ರಜಾವಾಣಿ ಚಿತ್ರ
ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಗೆ ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು – ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT