ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶುದ್ಧ ನೀರು ಕೊಡದಿದ್ದರೆ ಅಮಾನತು: ಡಿ.ಸಿ, ಸಿಇಒ ಸಭೆಯಲ್ಲಿ ಸಿಎಂ ಎಚ್ಚರಿಕೆ

Published 23 ಮೇ 2024, 15:51 IST
Last Updated 23 ಮೇ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ‘ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನಿಂದ ಜನರಿಗೆ ತೊಂದರೆಯಾದರೆ ಅದಕ್ಕೆ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಬರ ಮತ್ತು ಮುಂಗಾರು ಕೃಷಿ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಅವರು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

‘ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಎಂಜಿನಿಯರ್‌ಗಳೇ ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು’ ಎಂದು ತಾಕೀತು ಮಾಡಿದರು.

ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಖಾತರಿಪಡಿಸಬೇಕು ಹಾಗೂ ಕಲುಷಿತ ನೀರು ಪೂರೈಕೆ ಪ್ರಕರಣಗಳನ್ನು ತಡೆಯಬೇಕು ಎಂದು ಸೂಚನೆ ನೀಡಿದರು.

ಸಕಾಲದಲ್ಲಿ ರೈತರಿಗೆ ಸಾಲ:

ಬರ ಪರಿಹಾರದ ಮೊತ್ತ ರೈತರ ಖಾತೆಗೆ ಜಮೆಯಾದಾಗ ಅದನ್ನು ಸಾಲದ ಬಾಕಿಗಾಗಿ ವಜಾ ಮಾಡಿಕೊಳ್ಳಬಾರದು. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಇದಕ್ಕಾಗಿ ಜಿಲ್ಲಾ ಬ್ಯಾಂಕರ್‌ಗಳೊಂದಿಗೆ ಮಾತುಕತೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಗೆ ಸಂಬಂಧಿಸಿದಂತೆ ರೈತರು ಹಲವು ಸಂದೇಹಗಳನ್ನು ಹೊಂದಿದ್ದು, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪನಿಗಳೊಂದಿಗೆ ಚರ್ಚಿಸಿ, ರೈತರ ಅನುಮಾನಗಳನ್ನು ಪರಿಹರಿಸಿ, ಅವರಿಗೆ ಅನುಕೂಲವಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.

ವಾಡಿಕೆಗಿಂತ ಅಧಿಕ ಮಳೆ:

ಮಾರ್ಚ್‌ ಒಂದರಿಂದ ಈವರೆಗೆ 87 ಮಿ.ಮೀ ವಾಡಿಕೆ ಮಳೆ ಆಗಬೇಕಿತ್ತು. ಈ ವರ್ಷ 123 ಮಿ.ಮೀ ಮಳೆ ಆಗಿದೆ. ಅದರಲ್ಲಿ 8 ಜಿಲ್ಲೆಗಳಲ್ಲಿ ಅತ್ಯಧಿಕ ಮತ್ತು 8 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹಣಾ ಸಾಮರ್ಥ್ಯದ ಶೇ 20ರಷ್ಟು ನೀರು ಇದೆ. ರಾಜ್ಯದಾದ್ಯಂತ ಮಳೆ ಆಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಇದು ಹೆಚ್ಚಳವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಅವರು ವಿವರಿಸಿದರು.

ಕೃಷ್ಣಾ ನದಿ, ಭೀಮಾನದಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮೊದಲಾದ ಕಡೆ ಸಾವು ನೋವಿನ ಪ್ರಕರಣಗಳು ಹೆಚ್ಚಾಗಿವೆ. ಮುಂಬರುವ ದಿನಗಳಲ್ಲಿ ಸಾವು ನೋವಿನ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಗೆ ವಹಿಸಿ, ಸಾವಿನ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾನೂನು ಸಚಿವ ಎಚ್‌.ಕೆ.ಪಾಟೀಲ ಪಾಲ್ಗೊಂಡಿದ್ದರು.

82.4 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ

ಈ ಮುಂಗಾರು ಹಂಗಾಮಿನಲ್ಲಿ 82.4 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 2024–25 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಅಂದರೆ ಮೇ 17 ರವರೆಗೆ 2.95 ಲಕ್ಷ ಹೆಕ್ಟೇರು ಪ್ರದೇಶದಲ್ಲಿ ಬಿತ್ತನೆ ಗುರಿಗೆ 68600 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ 23 ರಷ್ಟು ಸಾಧನೆ ಆಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರ ನೀಡಿದರು.

ಈ ಮುಂಗಾರು ಹಂಗಾಮಿಗೆ ಸಹಾಯಧನದಡಿ 552350 ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು 901397 ಕ್ವಿಂಟಲ್‌ ಬೀಜ ಲಭ್ಯವಿದೆ. ಮೇ 22 ರ ವರೆಗೆ 5492.44 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 14608.49 ಕ್ವಿಂಟಲ್‌ ಬಿತ್ತನೆ ಬೀಜ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಲಭ್ಯವಿದೆ. ಬೇಡಿಕೆಗೆ ತಕ್ಕಂತೆ ಸಂಬಂಧಿಸಿದ ಸಂಸ್ಥೆಗಳಿಂದ ಬಿತ್ತನೆ ಬೀಜ ಪೂರೈಕೆ ಮಾಡಲಾಗುತ್ತಿದೆ ಎಂದರು. ಜೀವನೋಪಾಯ ನಷ್ಟ ಪರಿಹಾರಕ್ಕೆ ₹2800 ರಂತೆ ಸಣ್ಣ ಮತ್ತು ಅತಿಸಣ್ಣ ರೈತರಿಗೆ ವಿತರಿಸಲು ಕ್ರಮಕೈಗೊಳ್ಳಲಾಗುತ್ತಿದ್ದು ಇದಕ್ಕಾಗಿ ₹460 ಕೋಟಿಯನ್ನು 20 ಲಕ್ಷ ರೈತರಿಗೆ ಒದಗಿಸಲಾಗುವುದು ಎಂದು ವಿವರಿಸಿದರು.

ಹಾವೇರಿ ಜಿಲ್ಲೆಯಲ್ಲಿ ಮಳೆ ಆರಂಭವಾಗಿದ್ದರಿಂದ ಏಕಾಏಕಿ ರೈತರು ರಸಗೊಬ್ಬರ ಪಡೆಯಲು ಬಂದಿದ್ದರಿಂದ ನೂಕು ನುಗ್ಗಲು ಉಂಟಾಯಿತು.  ಏಪ್ರಿಲ್‌ 1 ರಿಂದ 3.22 ಲಕ್ಷ ಮೆಟ್ರಿಕ್‌ ಟನ್ ರಸಗೊಬ್ಬರ ಮಾರಾಟವಾಗಿದ್ದು ಒಟ್ಟು 1486067 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ರಸಗೊಬ್ಬರ ಲಭ್ಯತೆ ಬಗ್ಗೆ ನಿರಂತರವಾಗಿ ಮಾಹಿತಿ ಒದಗಿಸಬೇಕು.

ಡಿಸಿ ಸಿಇಓಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಬರಪರಿಹಾರ ಮತ್ತು ಇತರ ಕಾಮಗಾರಿಗಳ ಬಿಲ್ಲುಗಳ ಪಾವತಿಯನ್ನು ಪ್ರತಿ 15 ದಿನಗಳಿಗೊಮ್ಮೆ ಮಾಡಬೇಕು ಎಂದು ಸೂಚಿಸಿದರು. ‘ಚುನಾವಣಾ ನೀತಿ ಸಂಹಿತೆ ಅವಧಿ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಆದ್ದರಿಂದ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಅವರು ಹೇಳಿದರು.  

842 ರೈತರ ಆತ್ಮಹತ್ಯೆ ರಾಜ್ಯದಲ್ಲಿ 2023–24 ರಲ್ಲಿ 842 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು ಅದರಲ್ಲಿ 90 ಮನವಿಗಳು ತಿರಸ್ಕೃತವಾಗಿವೆ.

132 ಪ್ರಕರಣಗಳು ಡಿಬಿಟಿಗೆ ಬಾಕಿ ಉಳಿದಿದ್ದು 62 ಪ್ರಕರಣಗಳು ಉಪವಿಭಾಗ ಹಂತದಲ್ಲಿ ಬಾಕಿ ಇದೆ. ಉಳಿದ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಬಹಳಷ್ಟು ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಯ ನಿರೀಕ್ಷೆಯಲ್ಲಿಇರುವುದರಿಂದ ತಡವಾಗಿದೆ ಎಂದು ಅವರು ಹೇಳಿದರು.

ಈ ಹಂತದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಸಿದ್ದರಾಮಯ್ಯ ‘ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಅದಕ್ಕೆ ಕಾರಣ ಮತ್ತು ಪರಿಹಾರ ಏನು ಎಂಬ ಬಗ್ಗೆ  ಅಧ್ಯಯನ ನಡೆಸಿ’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT