ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌: ಕೃಷ್ಣಬೈರೇಗೌಡ

Published : 30 ಸೆಪ್ಟೆಂಬರ್ 2024, 15:54 IST
Last Updated : 30 ಸೆಪ್ಟೆಂಬರ್ 2024, 15:54 IST
ಫಾಲೋ ಮಾಡಿ
Comments

ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ವಿಕಾಸಸೌಧದಲ್ಲಿ ಸೋಮವಾರ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೀಡಬೇಕು ಎಂಬ ಬೇಡಿಕೆ ಇದೆ.  ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಲ್ಯಾಪ್‌ಟಾಪ್‌– ಮೊಬೈಲ್ ಎರಡೂ ರೀತಿ ಕೆಲಸ ಮಾಡಬಲ್ಲ ಟ್ಯಾಬ್‌ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಅಧಿಕಾರಿಗಳಿಗೆ ಟ್ಯಾಬ್‌ ವಿತರಿಸಲಾಗಿದೆ. ಮುಂದಿನ ವರ್ಷ ಎಲ್ಲರಿಗೂ ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳನ್ನು ಅನಗತ್ಯವಾಗಿ ಎಸಿ– ಡಿಸಿ ಕಚೇರಿಗಳಿಗೆ ನಿಯೋಜನೆ ಮೇಲೆ ಕಳಿಸಿರುವುದನ್ನು, ರದ್ದುಗೊಳಿಸುವ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್‌ ಆ್ಯಪ್‌ ಹಾಗೂ ಆಧಾರ್‌ ಸೀಡಿಂಗ್ ಹಾಗೂ ಪೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪತಿ– ಪತ್ನಿ ಪ್ರಕರಣದಲ್ಲಿ ಅಂತರ್‌ ಜಿಲ್ಲಾ ವರ್ಗಾವಣೆ ನೀಡುವ ಸಂಬಂಧ ಕೆಸಿಎಸ್‌ಆರ್‌ 16 ಎ ನಿಯಮದ ಅನ್ವಯ ನಿಯಮಬದ್ಧವಾಗಿ ಬಂದಿರುವ ಪ್ರಸ್ತಾವನೆಗಳ ಕುರಿತು ಮುಂದಿನ ವಾರದೊಳಗೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT