ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೃತೀಯ ಲಿಂಗಿಗಳಿಗೆ ಮೀಸಲಾತಿ: ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿದ ಹೈಕೋರ್ಟ್

Last Updated 20 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಾಧಿಕಾರ ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ 1ರಷ್ಟು ಸಮತಲ ಮೀಸಲಾತಿ (ಹಾರಿಜಾಂಟಲ್ ರಿಸರ್ವೇಷನ್) ಕಲ್ಪಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ.

ಈ ಕುರಿತಂತೆ, ‘ಸಂಗಮ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ‘ಜೀವಾ‘ ಸಂಸ್ಥೆಯ ಮಧ್ಯಂತರ ಸೇರ್ಪಡೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ‘ಜೀವಾ‘ ಸಂಸ್ಥೆಯ ಪರ ವಾದ ಮಂಡಿಸಿದ ಹಿರಿಯ ವಕೀಲೆ ಜೈಯ್ನಾ ಕೊಠಾರಿ,‘ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲಾ ವರ್ಗಗಳಲ್ಲಿ ಶೇ 1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಅನ್ನು ಸೇರ್ಪಡೆಗೊಳಿಸಿ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

‘ಸರ್ಕಾರದ ತಿದ್ದುಪಡಿ ನಿಯಮ ಕೇವಲ ಸರ್ಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕೆಂಬದು ನಮ್ಮ ಮನವಿ. ಈ ನಿಟ್ಟಿನಲ್ಲಿ ಸರ್ಕಾರಿ ಪ್ರಾಧಿಕಾರ, ನಿಗಮ-ಮಂಡಳಿಗಳಿಗೆ ಸಲಹೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೆಪ್ಟೆಂಬರ್‌ 22ರಂದು ನಾಲ್ಕು ವಾರ ಕಾಲಾವಕಾಶ ನೀಡಿತ್ತು.ಆದರೆ, ಸರ್ಕಾರ ಇನ್ನೂ ಉತ್ತರಿಸಿಲ್ಲ’ ಎಂದು ತಿಳಿಸಿದರು.

ಇದಕ್ಕೆ ಸರ್ಕಾರಿ ವಕೀಲರು, ನ್ಯಾಯಾಲಯದ ಆದೇಶ ಪಾಲಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಕೋರಿದರು.ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, 2021ರ ಸೆಪ್ಟೆಂಬರ್ 22ರಂದು ನ್ಯಾಯಾಲಯ ನೀಡಿದ ಆದೇಶ ಪಾಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT