ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ರಾಜಕೀಯ ತೀರ್ಪು ಎಂದು ವ್ಯಾಖ್ಯಾನಿಸಿರುವ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಮೇಲೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಬೇಕು‘ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಅಡ್ವೊಕೇಟ್ ಜನರಲ್‌ಗೆ ಪತ್ರ ಬರೆದಿದ್ದಾರೆ.
‘ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನ್ಯಾಯಾಂಗ ನಿಂದನೆ ಕಾಯ್ದೆ-1971ರ ಕಲಂ 15(1) (ಬಿ) ಅಡಿ ಒಪ್ಪಿಗೆ ನೀಡಬೇಕು‘ ಎಂದು ಅಬ್ರಹಾಂ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರಿಗೆ ಕೋರಿದ್ದಾರೆ.
‘ಹೈಕೋರ್ಟ್ ತೀರ್ಪನ್ನು ಸಚಿವರು ರಾಜಕೀಯ ತೀರ್ಪು ಎಂದು ವ್ಯಾಖ್ಯಾನಿಸಿದ್ದಾರೆ. ಈ ಮೂಲಕ ಉದ್ದೇಶ ಪೂರ್ವಕವಾಗಿ ನ್ಯಾಯಾಂಗದ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ. ಸಾರ್ವಜನಿಕರ ದೃಷ್ಟಿಯಲ್ಲಿ ಹೈಕೋರ್ಟ್ ಅನ್ನು ನಕಾರಾತ್ಮಕವಾಗಿ ಬಿಂಬಿಸುವ ಯತ್ನ ಮಾಡಿದ್ದಾರೆ’ ಎಂದು ಅಬ್ರಹಾಂ ಪತ್ರದಲ್ಲಿ ವಿವರಿಸಿದ್ದಾರೆ.