ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಬಾಕಿ ಪಾವತಿಸಲು ಸಾರಿಗೆ ನೌಕರರ ಆಗ್ರಹ

Published 19 ಫೆಬ್ರುವರಿ 2024, 23:30 IST
Last Updated 19 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿಯನ್ನು ಪಾವತಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್, ‘2020ರ ಡಿಸೆಂಬರ್ ಹಾಗೂ 2021ರ ಏಪ್ರಿಲ್‌ನಲ್ಲಿ ಹಮ್ಮಿಕೊಂಡಿದ್ದ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರ ಮೇಲೆ ಹಾಕಿರುವ ಪ್ರಕರಣಗಳು ಹಾಗೂ ಶಿಸ್ತು ಕ್ರಮ ರದ್ದುಗೊಳಿಸಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದು ಒತ್ತಾಯಿಸಿದರು.

‘ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರಿ ನೌಕರರಿಗೆ ನೀಡುವ ವೇತನ ಮತ್ತು ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ವಿಸ್ತರಿಸಬೇಕು. ಸಾರಿಗೆ ಸಂಘಗಳ ಸಂಸ್ಥೆಗಳಿಗೆ ಕೂಡಲೇ ಚುನಾವಣೆ ನಡೆಸಬೇಕು. ಸಾರಿಗೆ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೌಲಭ್ಯ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಕೆಬಿಎನ್‌ಎನ್‌ ವರ್ಕರ್ಸ್‌ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಎಸ್. ನಾಗರಾಜು, ‘ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ 2024ರ ಮಾರ್ಚ್‌ 4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT