ಕೊಪ್ಪಳ: ‘ತುಂಗಭದ್ರಾ ಜಲಾಶಯದಲ್ಲಿ 70 ವರ್ಷಗಳಲ್ಲಿ ಮೊದಲ ಬಾರಿಗೆ ಗೇಟ್ ತುಂಡಾಗಿದ್ದು, 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿ ಬದಲಾಯಿಸಬೇಕಾಗಿತ್ತು ಎಂದು ತಜ್ಞರು ತಿಳಿಸಿದ್ದಾರೆ. ಇನ್ನು ಮುಂದೆ ಅವರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಮೂರೂ ರಾಜ್ಯ ಸರ್ಕಾರಗಳು ಈ ಕುರಿತು ಕ್ರಮ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ಜಲಾಶಯದಲ್ಲಿ ಕೊಚ್ಚಿ ಹೋದ 19 ಗೇಟ್ ಸ್ಥಳವನ್ನು ಮಂಗಳವಾರ ಪರಿಶೀಲಿಸಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಜಲಾಶಯ ಗೇಟ್‌ಗಳ ನಿರ್ಮಾಣ ಮತ್ತು ಸುರಕ್ಷತಾ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಎಂ. ‘ರೈತರ ಮೊದಲ ಬೆಳೆಗೆ 90 ಟಿಎಂಸಿ ಅಡಿ ನೀರು ಬೇಕಾಗಿದ್ದು, ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯ ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟ ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ಅಡಿ ನೀರು ಉಳಿಯುತ್ತದೆ. ಗೇಟ್ ದುರಸ್ತಿ ತ್ವರಿತವಾಗಿ ಮುಗಿಸಲು ಸೂಚಿಸಲಾಗಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದರು.
‘ಪ್ರಸ್ತುತ ತುಂಡಾಗಿರುವ ಗೇಟ್ ದುರಸ್ತಿಗಾಗಿ 50 ರಿಂದ 60 ಟಿಎಂಸಿ ಅಡಿ ನೀರು ಹೊರಗೆ ಬಿಡಬೇಕಾಗಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 17ರ ಬಳಿಕ ಮತ್ತೆ ಮಳೆಯಾಗಲಿದೆ. ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ’ ಎಂದು ತಿಳಿಸಿದರು.