ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ– ಚಿಕ್ಕಮಗಳೂರು: ಮುರೊಳ್ಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಆಗ್ರಹ

Published 5 ಮಾರ್ಚ್ 2024, 23:30 IST
Last Updated 5 ಮಾರ್ಚ್ 2024, 23:30 IST
ಅಕ್ಷರ ಗಾತ್ರ

‌ಬೆಂಗಳೂರು: ಉಡುಪಿ– ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ಗೆ ಭಾರೀ ಪೈಪೋಟಿ ಏರ್ಪಟ್ಟಿದೆ. ಈ ಕ್ಷೇತ್ರದಿಂದ ಸಂಭವನೀಯ ಅಭ್ಯರ್ಥಿಯಾಗಿ ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಹೆಸರು ಮುಂಚೂಣಿಗೆ ಬರುತ್ತಿದ್ದಂತೆ, ಮತ್ತೊಬ್ಬ ಪ್ರಬಲ ಟಿಕೆಟ್‌ ಆಕಾಂಕ್ಷಿ ಸುಧೀರ್ ಮುರೊಳ್ಳಿ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಡ ಹೆಚ್ಚಿದೆ.

ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆ ಬೆನ್ನಲ್ಲೆ, ಈ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ, ಕ್ರೆಡೆಲ್‌ ಅಧ್ಯಕ್ಷರೂ ಆಗಿರುವ ಟಿ.ಡಿ. ರಾಜೇಗೌಡ ಮತ್ತು ತೀರ್ಥಹಳ್ಳಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ ಮುರೊಳ್ಳಿ ಅವರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿದರು.

‘ಕೆಪಿಸಿಸಿ ವಕ್ತಾರರಾಗಿರುವ ಮುರೊಳ್ಳಿ, ಕೊಪ್ಪ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ, ಮಾಧ್ಯಮ ವಿಶ್ಲೇಷಕರಾಗಿ, ನಾಯಕತ್ವ ಮತ್ತು ತರಬೇತಿ ವಿಭಾಗದ ಸದಸ್ಯರಾಗಿ ಪಕ್ಷದ ಕೆಲಸ ಮಾಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ಪರಿಚಿತರು. ಉಡುಪಿ– ಚಿಕ್ಕಮಗಳೂರಿನ ಎಲ್ಲ ರೈತ, ದಲಿತ, ಕಾರ್ಮಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮುರೊಳ್ಳಿ ಅವರಿಗೆ ಎಲ್ಲ ಪಕ್ಷಗಳಲ್ಲಿ ಹಿತೈಷಿಗಳಿದ್ದಾರೆ. ತುಳು, ಕನ್ನಡ ಮತ್ತು ಕುಂದಾಪುರ ಕನ್ನಡ ಬಲ್ಲವರಾಗಿರುವ ಅವರು ಜನ ಸಮುದಾಯವನ್ನು ಸೆಳೆಯಬಲ್ಲರು’ ಎಂದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ರಾಜೇಗೌಡ ತಿಳಿಸಿದ್ದಾರೆ.

‘ಕಾನೂನು, ರಾಜಕೀಯ, ಕೃಷಿ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳ ಕುರಿತು ಮಾತನಾಡಬಲ್ಲ, ವಕೀಲರೂ ಆಗಿರುವ ಮುರೊಳ್ಳಿ ಅವರಿಗೇ ಕ್ಷೇತ್ರದ ಟಿಕೆಟ್‌ ನೀಡಬೇಕು‘ ಎಂದೂ ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.

ಅಭ್ಯರ್ಥಿ ಆಯ್ಕೆ: 7ರಂದು ಸಭೆ– ಡಿಕೆಶಿ

‘ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಇದೇ 7ರಂದು ದೆಹಲಿಯಲ್ಲಿ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಾನು ಮತ್ತು ಮುಖ್ಯಮಂತ್ರಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT