ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ವಿ.ವಿ.ಗಳಲ್ಲಿ ಏಕರೂಪದ ಪಠ್ಯಕ್ರಮ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ

Last Updated 12 ಸೆಪ್ಟೆಂಬರ್ 2022, 11:24 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈಗ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯಕ್ರಮವಿದೆ’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು 2019ರಲ್ಲಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಠ್ಯಕ್ರಮ ಪರಿಷ್ಕರಿಸಿದ್ದೆ. ಆಗ ಮೂರು ವರ್ಷಗಳಿಗೊಮ್ಮೆ ಸ್ನಾತಕೋತ್ತರ ಕೋರ್ಸ್‌ಗಳ ಪಠ್ಯಕ್ರಮ ಹಾಗೂ ಐದು ವರ್ಷಗಳಿಗೊಮ್ಮೆ ಸ್ನಾತಕ ಕೋರ್ಸ್‌ಗಳ ಪಠ್ಯಕ್ರಮ ಪರಿಷ್ಕರಣೆಗೆ ಅವಕಾಶವಿತ್ತು. ಎನ್‌ಇಪಿ ಅನುಷ್ಠಾನಗೊಂಡ ನಂತರ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಏಕರೂಪದ ಪ‍ಠ್ಯಕ್ರಮ ಅಧ್ಯಯನ ಮಾಡುತ್ತಿದ್ದಾರೆ. ಆದರೆ, ಆಯಾ ವಿಶ್ವವಿದ್ಯಾಲಯಕ್ಕೆ ಶೇ.10 ಪಠ್ಯಕ್ರಮವನ್ನು ಹೆಚ್ಚುವರಿಯಾಗಿ ಸೇರಿಸಲು ಹಾಗೂ ಕಡಿತಗೊಳಿಸಲು ಅವಕಾಶವಿದೆ’ ಎಂದರು.

‘ಸರ್ಕಾರದ ಮಾರ್ಗಸೂಚಿ ಪ್ರಕಾರ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್) ಜಾರಿಗೆ ತರಲಾಗಿದೆ. ಪ್ರವೇಶ ಪ್ರಕ್ರಿಯೆ, ಪರೀಕ್ಷೆ, ಫಲಿತಾಂಶದ ದಾಖಲೆಗಳು, ಅಂಕಪಟ್ಟಿಗಳು ಮತ್ತು ಪದವಿ ಪ್ರಮಾಣಪತ್ರಗಳನ್ನು ಇದರಲ್ಲಿಯೇ ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಜೊತೆಗೆ, ಘಟಿಕೋತ್ಸವ ಪ್ರಮಾಣಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದಕ್ಕೂ ಅವಕಾಶವಿದೆ. ಕೆಲವೊಮ್ಮೆ ರಾಜ್ಯದಾದ್ಯಂತ ಹೆಚ್ಚಿನ ವಿದ್ಯಾರ್ಥಿಗಳು ಏಕಕಾಲಕ್ಕೆ ಲಾಗಿನ್‌ ಮಾಡುವುದರಿಂದ ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಂತರ ವೆಬ್‌ಸೈಟ್‌ ಮತ್ತೆ ಸುಗಮವಾಗಿ ಕಾರ್ಯನಿರ್ವಹಿಸುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಶೈಕ್ಷಣಿಕ ಚಟುವಟಿಕೆಗಳ ವಿಸ್ತರಣಾ ಯೋಜನೆಯಡಿ ಮಲೇಷ್ಯಾ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಲ್ಲಿಗೆ ಹೋಗಲಿರುವ ವಿದ್ಯಾರ್ಥಿಗಳ ವಸತಿ ಮತ್ತು ಅಧ್ಯಯನ ವೆಚ್ಚ ಭರಿಸಲು ಹಣಕಾಸಿನ ಕೊರತೆ ಉಂಟಾಗಬಹುದು. ಹಾಗಾಗಿ ಅನುದಾನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.

‘ಆರ್‌ಸಿಯು ಹೊಸ ಕ್ಯಾಂಪಸ್‌ ನಿರ್ಮಾಣಕ್ಕಾಗಿ ಹಿರೇಬಾಗೇವಾಡಿಯ ಮಲ್ಲಪ್ಪನಗುಡ್ಡದ ಬಳಿ ಸರ್ಕಾರ 126 ಎಕರೆ ಜಾಗ ನೀಡಿದೆ. ಕಾಂಪೌಂಡ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಳೆಗಾಲದ ನಂತರ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಇದ್ದರು.

‘ಡಾಕ್ಟರ್‌ ಆಫ್‌ ಲೆಟರ್ಸ್‌’ ಗೌರವಕ್ಕೆ ಭಾಜನವಾದ ನಟ ರಮೇಶ ಅರವಿಂದ

‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೆ.14ರಂದು ಮಧ್ಯಾಹ್ನ 12.30ಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು)ದ 10ನೇ ಘಟಿಕೋತ್ಸವ ನಡೆಯಲಿದೆ. 43,607 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 11 ಚಿನ್ನದ ಪದಕ ನೀಡಲಾಗುವುದು. 48 ವಿದ್ಯಾರ್ಥಿಗಳಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಧ್ಯಕ್ಷತೆ ವಹಿಸುವರು. ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಆಗಮಿಸುವರು. ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ ಘಟಿಕೋತ್ಸವ ಭಾಷಣ ಮಾಡುವರು’ ಎಂದು ತಿಳಿಸಿದರು.

ರಮೇಶ ಅರವಿಂದಗೆ ‘ಡಾಕ್ಟರ್‌ ಆಫ್‌ ಲೆಟರ್ಸ್‌’

‘ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುತ್ತಿದೆ. ಸಾಮಾಜಿಕ ಕ್ಷೇತ್ರದಲ್ಲಿ ಶ್ರಮಿಸಿದ ಸಮಾಜಸೇವಕ ವಿ.ರವಿಚಂದರ್‌ ಅವರಿಗೆ ಡಾಕ್ಟರ್‌ ಆಫ್‌ ಸೈನ್ಸ್‌, ಚಲನಚಿತ್ರ ರಂಗದಲ್ಲಿ ಮಾಡಿದ ಸಾಧನೆಗಾಗಿ ನಟ ರಮೇಶ ಅರವಿಂದ ಮತ್ತು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗಾಗಿ ಬೀದರ್‌ನ ಬಸವ ತತ್ವ ಪ್ರಚಾರಕಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ‘ಡಾಕ್ಟರ್‌ ಆಫ್‌ ಲೆಟರ್ಸ್‌’ ಪ್ರದಾನ ಮಾಡಲಾಗುವುದು’ ಎಂದು ಅವರು ಹೇಳಿದರು.

‘ವ್ಯಾಪ್ತಿ ಹಾಗೂ ಗಾತ್ರದಲ್ಲಿ ಆರ್‌ಸಿಯು ರಾಜ್ಯದಲ್ಲೇ ದೊಡ್ಡ ವಿಶ್ವವಿದ್ಯಾಲಯವಾಗಿದೆ. ನ್ಯಾಕ್‌ನಿಂದ ‘ಬಿ+’ ಮಾನ್ಯತೆ ಪಡೆದುಕೊಂಡಿದೆ. ಶೈಕ್ಷಣಿಕ, ಆಡಳಿತಾತ್ಮಕ, ಭೌತಿಕ ಮತ್ತು ಬೌದ್ಧಿಕವಾಗಿ ಬೆಳೆಯುತ್ತಿದ್ದು, ಇ–ಆಡಳಿತ ವ್ಯವಸ್ಥೆ ಜಾರಿಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ’ ಎಂದರು.

‘ಆರ್‌ಸಿಯು ವ್ಯಾಪ್ತಿಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ 418 ಪದವಿ ಕಾಲೇಜುಗಳಿದ್ದು, 1.64 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2,500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ಗಳ ಅಧ್ಯಯನ ಮಾಡುತ್ತಿದ್ದಾರೆ. 4 ವಿಷಯಗಳಲ್ಲಿ ಪಿ.ಜಿ ಡಿಪ್ಲೊಮಾ ಕೋರ್ಸ್‌ಗಳಿವೆ. 530 ವಿದ್ಯಾರ್ಥಿಗಳು ಹಲವು ವಿಷಯಗಳಲ್ಲಿ ಸಂಶೋಧನೆಯಲ್ಲಿ ನಿರತವಾಗಿದ್ದಾರೆ’ ಎಂದು ತಿಳಿಸಿದರು.

ಕುಲಸಚಿವ ಪ್ರೊ.ಎಂ.ಹನುಮಂತಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ, ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಸ್‌.ಎಂ.ಗಂಗಾಧರಯ್ಯ, ಪ್ರೊ.ಚಂದ್ರಕಾಂತ ವಾಘಮೋರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT