ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಮೇಲೆ ಆರೋಪ: CM ಸಿದ್ದರಾಮಯ್ಯಗೆ ಗಜೇಂದ್ರ ಸಿಂಗ್‌ ಶೇಖಾವತ್‌ ತಿರುಗೇಟು

Published 30 ಅಕ್ಟೋಬರ್ 2023, 3:45 IST
Last Updated 30 ಅಕ್ಟೋಬರ್ 2023, 3:45 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಮಳೆಯ ಕೊರತೆಯ ಹೊರತಾಗಿಯೂ ಕರ್ನಾಟಕದ ನೀರಿನ ಸಮಸ್ಯೆಗಳನ್ನು ಪರಿಹರಿಸಿಲ್ಲ ಎಂದು ಎಕ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೊಂಡ ಪೋಸ್ಟ್‌ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ತಿರುಗೇಟು ನೀಡಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ‘ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ’ ಎಂದು ತಿವಿದಿದ್ದಾರೆ. ಸುದೀರ್ಘ ಪೋಸ್ಟ್‌ ಮೂಲಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.

- ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.

- ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

- 2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

- ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ. ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು ಎಂದಿದ್ದಾರೆ. 

ಈ ಹಿಂದೆ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಳೆಯ ಕೊರತೆಯ ಹೊರತಾಗಿಯೂ ಕರ್ನಾಟಕದ ನೀರಿನ ಸಮಸ್ಯೆಗಳನ್ನು ಪರಿಹರಿಸಿಲ್ಲ. ರಾಜ್ಯದ ನೀರಿನ ಹಿತಾಸಕ್ತಿಯನ್ನು ಯಾವ ಕ್ತಕ ಬಿಜೆಪಿ ಸಂಸದರೂ ಬೆಂಬಲಿಸಿಲ್ಲ. ಮೇಕೆದಾಟು ಮತ್ತು ಮಹದಾಯಿ ನದಿಯಂತಹ ಯೋಜನೆಗಳು ಕೇಂದ್ರದ ಅನುಮೋದನೆಗೆ ಬಾಕಿ ಇವೆ. ರಾಜ್ಯದ ಉಪಕ್ರಮ, ಉತ್ತರ ಕರ್ನಾಟಕದ ನೀರಾವರಿಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆ, ಕೇಂದ್ರದಿಂದ ಗೆಜೆಟ್ ಅಧಿಸೂಚನೆ ಮತ್ತು ರಾಷ್ಟ್ರೀಯ ಸ್ಥಾನಮಾನಕ್ಕಾಗಿ ಕಾಯುತ್ತಿದೆ.

ಪ್ರಿಯ ಪ್ರಧಾನಮಂತ್ರಿಗಳೇ, ನೀವು ಕನ್ನಡಿಗರಿಗೆ ಇನ್ನೆಷ್ಟು ಬಾಯಾರಿಕೆ ಕೊಡಲು ಬಯಸುತ್ತೀರಾ’ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ಅಲ್ಲದೆ #WhyNoLoveForKarnataka? #AnswerMadiModi ಅಭಿಯಾನವನ್ನೂ ಆರಂಭಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT