ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ ಯೋಜನೆ: ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಮೀನಮೇಷ

Published 4 ಜುಲೈ 2023, 12:57 IST
Last Updated 4 ಜುಲೈ 2023, 12:57 IST
ಅಕ್ಷರ ಗಾತ್ರ

ನವದೆಹಲಿ: ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಿದೆ. 

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಕೇಂದ್ರ ಸರ್ಕಾರಕ್ಕೆ ಸುಮಾರು 10 ಸಲ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾದ ಬಳಿಕ ‘ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ’ ಎಂದೂ ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಮಾನ್ಯತೆ ಸಿಕ್ಕಿದ್ದರಿಂದ ಯೋಜನೆಯ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದೂ ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯದ ನಾಯಕರು ಹೇಳುತ್ತಾ ಬಂದಿದ್ದಾರೆ. ರಾಷ್ಟ್ರೀಯ ಮಾನ್ಯತೆ ಸಿಗಲು ಕೇಂದ್ರ ಸಚಿವ ಸಂಪುಟದ ಅಂಕಿತ ಬೇಕು. ಆದರೆ, ಸಚಿವ ಸಂಪುಟದಿಂದ ಇಲ್ಲಿಯವರೆಗೆ ಒಪ್ಪಿಗೆ ಸಿಕ್ಕಿಲ್ಲ. 

ಕೇಂದ್ರ ಜಲಶಕ್ತಿ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಈ ಯೋಜನೆಯು ರಾಷ್ಟ್ರೀಯ ಯೋಜನೆಯಾಗಲು ಅರ್ಹತೆ ಪಡೆದಿದೆ. ಈ ಸಂಬಂಧ ಜಲಶಕ್ತಿ ಸಚಿವಾಲಯದ ಉನ್ನತಾಧಿಕಾರ ಸಮಿತಿ ಸಹ ಶಿಫಾರಸು ಮಾಡಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಹಣಕಾಸು ಸಚಿವಾಲಯದ ಸಾರ್ವಜನಿಕ ಹೂಡಿಕೆ ಮಂಡಳಿಯು 2022ರ ಅಕ್ಟೋಬರ್‌ 12ರಂದು ಒಪ್ಪಿಗೆ ನೀಡಿದೆ. ಇದಾಗಿ ಎಂಟು ತಿಂಗಳು ಕಳೆದರೂ ಮತ್ತೆ ಯಾವ ಪ್ರಕ್ರಿಯೆಯೂ ನಡೆದಿಲ್ಲ. 

ಈ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರು (ತುಂಗಾ ನದಿಯಿಂದ 17.40 ಟಿಎಂಸಿ ಅಡಿ ಹಾಗೂ ಭದ್ರಾ ಜಲಾಶಯದಿಂದ 12.50 ಟಿಎಂಸಿ ಅಡಿ) ಬಳಕೆ ಮಾಡಲಾಗುತ್ತದೆ. ಈ ಯೋಜನೆ ಮೂಲಕ 367 ಕೆರೆಗಳನ್ನು ತುಂಬಿಸಲಾಗುತ್ತದೆ. 2.25 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ವ್ಯವಸ್ಥೆ ಆಗಲಿದೆ. 

ಈ ಯೋಜನೆಗೆ ತಗಲುವ ಒಟ್ಟು ವೆಚ್ಚ ₹21,473 ಕೋಟಿ. ಯೋಜನೆಗೆ ₹5,300 ಕೋಟಿ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಈ ಸಲದ ಕೇಂದ್ರದ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಅನುದಾನದ ಕಂತು ಸಹ ಇಲ್ಲಿಯ ವರೆಗೆ ಬಿಡುಗಡೆ ಆಗಿಲ್ಲ. 

ಈ ಯೋಜನೆಯ ₹13,507 ಕೋಟಿ ಮೊತ್ತದ ಕಾಮಗಾರಿಗಳನ್ನು ಗುತ್ತಿಗೆ ನೀಡಲಾಗಿದೆ. ಇಲ್ಲಿಯವರೆಗೆ ₹7 ಸಾವಿರ ಕೋಟಿಯ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಕೇಂದ್ರದ ಅನುದಾನ ಬಿಡುಗಡೆಯಾದರೆ ಕಾಮಗಾರಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ. 

ಕೇಂದ್ರ ಸಚಿವರಿಗೆ ಮನವಿ

‘ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ಮಾಡುವಂತೆಯೂ ಕೋರಲಾಗಿದೆ. ಕಾಮಗಾರಿಯನ್ನು ಆದಷ್ಟು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಬರಪೀಡಿತ ಜಿಲ್ಲೆಗಳ ರೈತರಿಗೆ ನೀರು ಒದಗಿಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT