ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿಲ್ಲ: ಕೇಂದ್ರ ಸರ್ಕಾರ

ಲೋಕಸಭೆಯಲ್ಲಿ ಜಲಶಕ್ತಿ ಸಚಿವರ ಸ್ಪಷ್ಟೋಕ್ತಿ
Published 11 ಫೆಬ್ರುವರಿ 2024, 0:30 IST
Last Updated 11 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ನವದೆಹಲಿ: ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ನೀರಾವರಿ ಯೋಜನೆ’ಯನ್ನಾಗಿ ಘೋಷಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

ಲೋಕಸಭೆಯಲ್ಲಿ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಕೇಳಿರುವ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ಬಿಶ್ವೇಶ್ವರ ತುಡು ಈ ಉತ್ತರ ನೀಡಿದ್ದಾರೆ. 

ಕೇಂದ್ರ ಜಲಶಕ್ತಿ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಈ ಯೋಜನೆಯು ರಾಷ್ಟ್ರೀಯ ಯೋಜನೆಯಾಗಲು ಅರ್ಹತೆ ಪಡೆದಿದೆ. ಈ ಸಂಬಂಧ ಜಲಶಕ್ತಿ ಸಚಿವಾಲಯದ ಉನ್ನತಾಧಿಕಾರ ಸಮಿತಿ ಸಹ ಶಿಫಾರಸು ಮಾಡಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಹಣಕಾಸು ಸಚಿವಾಲಯದ ಸಾರ್ವಜನಿಕ ಹೂಡಿಕೆ ಮಂಡಳಿಯು 2022ರ ಅಕ್ಟೋಬರ್‌ 12ರಂದು ಒಪ್ಪಿಗೆ ನೀಡಿದೆ. ಇದಾಗಿ ಎಂಟು ತಿಂಗಳು ಕಳೆದರೂ ಮತ್ತೆ ಯಾವ ಪ್ರಕ್ರಿಯೆಯೂ ನಡೆದಿಲ್ಲ. 

ಈ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರು (ತುಂಗಾ ನದಿಯಿಂದ 17.40 ಟಿಎಂಸಿ ಅಡಿ ಹಾಗೂ ಭದ್ರಾ ಜಲಾಶಯದಿಂದ 12.50 ಟಿಎಂಸಿ ಅಡಿ) ಬಳಕೆ ಮಾಡಲಾಗುತ್ತದೆ. ಈ ಯೋಜನೆ ಮೂಲಕ 367 ಕೆರೆಗಳನ್ನು ತುಂಬಿಸಲಾಗುತ್ತದೆ. 2.25 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ವ್ಯವಸ್ಥೆ ಆಗಲಿದೆ. 

ಈ ಯೋಜನೆಗೆ ತಗಲುವ ಒಟ್ಟು ವೆಚ್ಚ ₹16,125 ಕೋಟಿ. ಯೋಜನೆಗೆ ₹5,300 ಕೋಟಿ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು 2023ರ ಕೇಂದ್ರದ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಅನುದಾನ ಇಲ್ಲಿಯವರೆಗೆ ಬಿಡುಗಡೆ ಆಗಿಲ್ಲ. 

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಕೇಂದ್ರ ಸರ್ಕಾರಕ್ಕೆ ಸುಮಾರು 10 ಸಲ ಮನವಿ ಸಲ್ಲಿಸಿದ್ದಾರೆ. 

ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯ (ಡಿಪಿಆರ್‌) ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 28ನೇ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಸದಸ್ಯರ ಅಭಿಪ್ರಾಯಗಳನ್ನು ಪರಿಗಣಿಸಿ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲಿಸಲು ಹಾಗೂ ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ವಾಪಸ್‌ ಕಳುಹಿಸಲಾಗಿದೆ. ಆಯೋಗವು ವಿವಿಧ ತಾಂತ್ರಿಕ ಹಾಗೂ ಆರ್ಥಿಕ ಅಂಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ಈ ಯೋಜನೆಗೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯವು ಅರಣ್ಯ ಅನುಮೋದನೆ ನೀಡಿಲ್ಲ ಎಂದೂ ಅವರು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT