ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುಪಿಎಸ್‌ಸಿ| ಪ್ರಾದೇಶಿಕ ಭಾಷೆಯಲ್ಲಿರಲಿ ಪರೀಕ್ಷೆ: ನಾಗಾಭರಣ ಪತ್ರ

Last Updated 2 ಜೂನ್ 2022, 15:43 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಇದೇ 5ರಂದು ನಡೆಸುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಕನ್ನಡ ಸೇರಿ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಅವಕಾಶ ನೀಡುವ ಬಗ್ಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪೂರ್ವಭಾವಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಅವಕಾಶ ಇರದಿರುವುದರಿಂದ ಗ್ರಾಮೀಣ ಭಾಗದ ಪ್ರತಿಭಾನ್ವಿತ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಪೂರ್ವಭಾವಿ ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಯುವುದು ಸಮಸ್ಯೆಯಾಗಿದೆ. ಗೊತ್ತಿರದ ಭಾಷೆಗಳಲ್ಲಿ ಅಭ್ಯರ್ಥಿಗಳಿಗೆ ತಮ್ಮ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ಐಎಎಸ್‌ ಪೂರ್ವಭಾವಿ ಪರೀಕ್ಷೆಯ ಪಠ್ಯ ಮತ್ತು ಕರ್ನಾಟಕ ಸರ್ಕಾರ ನಡೆಸುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ಪಠ್ಯದಲ್ಲಿ ಬಹುತೇಕ ಸಾಮ್ಯ ಇರುತ್ತದೆ. ಭಾಷಾ ಸಮಸ್ಯೆಯಿಂದ ಐಎಎಸ್‌ ಪರೀಕ್ಷೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಯಶಸ್ಸು ಸಾಧ್ಯವಾಗುತ್ತಿಲ್ಲ. ಇದರಿಂದ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ನೀಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT