ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಭೇಟಿಯಾದ ವಿ. ಸೋಮಣ್ಣ: ಮುಕ್ಕಾಲು ತಾಸು ರಹಸ್ಯ ಮಾತುಕತೆ

ಬಿಜೆಪಿ ಮುಖಂಡ ವಿ. ಸೋಮಣ್ಣ ಅವರು ಕೇತಗಾನಹಳ್ಳಿ ತೋಟದ ಮನೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬುಧವಾರ ಭೇಟಿ ಮಾಡಿದರು.
Published 31 ಜನವರಿ 2024, 15:26 IST
Last Updated 31 ಜನವರಿ 2024, 15:26 IST
ಅಕ್ಷರ ಗಾತ್ರ

ರಾಮನಗರ: ಬಿಜೆಪಿ ಮುಖಂಡ ವಿ. ಸೋಮಣ್ಣ ಅವರು ಕೇತಗಾನಹಳ್ಳಿ ತೋಟದ ಮನೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬುಧವಾರ ಭೇಟಿ ಮಾಡಿದರು.

ಉಭಯ ಕುಶಲೋಪರಿ ನಡೆಸಿದ ಇಬ್ಬರೂ, ನಂತರ ಸ್ಥಳದಲ್ಲಿದ್ದವರನ್ನು ಹೊರಗಡೆ ಕಳಿಸಿ ಮುಕ್ಕಾಲು ತಾಸು ರಹಸ್ಯವಾಗಿ ಮಾತುಕತೆ ನಡೆಸಿದರು.

ತುಮಕೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಸೋಮಣ್ಣ ಅವರು, ಇತ್ತೀಚೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಈಗ, ಅವರ ಪುತ್ರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯವ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ಸೋಮಣ್ಣ ಅವರು ನಂತರ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿದ್ದವು.

ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನೇಮಕವಾಗುತ್ತಿದ್ದಂತೆ ಸೋಮಣ್ಣ ಅವರು, ತಮ್ಮ ವರಸೆ ಬದಲಿಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟ ಅವರು, ತಾವು ಅಲ್ಲಿನ ಆಕಾಂಕ್ಷಿ ಎಂದು ಹೇಳಿಕೊಳ್ಳತೊಡಗಿದರು. ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯದ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದರು.

ಸದ್ಯ ಬಿಜೆಪಿ ಸಂಸದರು ಪ್ರತಿನಿಧಿಸುತ್ತಿರುವ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಲ್ಲಿಂದ ದೇವೇಗೌಡ ಅವರ ಕುಟುಂಬದವರೊಬ್ಬರು ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ನಡುವೆಯೇ ಸೋಮಣ್ಣ ಅವರು ದೇವೇಗೌಡ ಅವರ ಭೇಟಿ ಬಳಿಕ, ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT