ಬೆಂಗಳೂರು: 'ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣ ವನ್ನು ರಾಜ್ಯ ಸರ್ಕಾರ ನೇಮಿಸಿರುವ ಎಸ್ಐಟಿಯು (ವಿಶೇಷ ತನಿಖಾ ದಳ) ತನಿಖೆ ನಡೆಸುವ ವ್ಯಾಪ್ತಿ ಹೊಂದಿಲ್ಲ’ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವನ್ನು ಹೈಕೋರ್ಟ್‌ನಲ್ಲಿ ಪ್ರತಿನಿಧಿಸುತ್ತಿರುವ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಪ್ರತಿಪಾದಿಸಿದರು.
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು’ ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಖುದ್ದು ಹಾಜರಾಗಿದ್ದ ಆರ್.ವೆಂಕಟರಮಣಿ ಅವರು, ‘ಬ್ಯಾಂಕ್‌ನಲ್ಲಿ ₹50 ಕೋಟಿಗಿಂತಲೂ ಹೆಚ್ಚಿನ ಮೊತ್ತದ ಅವ್ಯವಹಾರ ನಡೆದಿದೆ. ಇಂತಹ ಪ್ರಕರಣವನ್ನು ಸಿಬಿಐ ವಿಚಾರಣೆಗೆ ಒಳಪಡಿಸಲು ಅವಕಾಶವಿದೆ. ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್ ಅಧಿಕಾರಿಗಳಲ್ಲದೇ ಇತರರ ವಿರುದ್ಧವೂ ತನಿಖೆ ನಡೆಸಬಹು ದಾಗಿದೆ. ರಾಜ್ಯ ಸರ್ಕಾರ ತನಿಖೆಗಾಗಿ ಎಸ್ಐಟಿ ರಚಿಸಿದೆಯಾದರೂ, ಎಸ್ಐಟಿ ತನಿಖಾ ವ್ಯಾಪ್ತಿ ಹೊಂದಿಲ್ಲ. ಅಷ್ಟಕ್ಕೂ, ದಾಖಲೆ ಪರಿಶೀಲಿಸಿದ ಬಳಿಕ ಸಿಬಿಐಗೆ ಒಪ್ಪಿಗೆಯಾದರೆ ಎಸ್ಐಟಿ ತನಿಖೆಗೆ ಸಲಹೆ ನೀಡಬಹುದು’ ಎಂದರು.
ಇದಕ್ಕೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಆರೋಪಿತ ದೂರುದಾರರು (ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ) ತಮಗೆ ಹೊಂದುವ ತನಿಖಾ ಸಂಸ್ಥೆಯನ್ನು ಆಯ್ದುಕೊಳ್ಳಲು ಆಗದು. ಪೊಲೀಸ್, ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ’ ಎಂದರು.
ಮುಂದುವರಿದು, ‘ಬ್ಯಾಂಕ್ ಮತ್ತು ಆರ್‌ಬಿಐ ಏನು ಮಾಡಬೇಕೆಂದಿದೆಯೋ ಅದನ್ನು ಮಾಡಲಿ. ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸದೇ ಮೌನವಹಿಸುವಂತೆ ಹೇಳಲಾಗದು. ಇದು ಸಾಂವಿಧಾನಿಕ ಪ್ರಶ್ನೆಯಾಗಿದ್ದು, ಇದಕ್ಕೆ ನ್ಯಾಯಾಲಯ ಉತ್ತರಿಸಬೇಕಿದೆ. ಸದ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪರ ಹಾಜರಾಗಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರೂ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿತು.
ಇದೇ ವೇಳೆ ಶಶಿಕಿರಣ್ ಶೆಟ್ಟಿ, ‘ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳಾದ ನಿತೇಶ್ ರಂಜನ್, ಎ.ಮಣಿಮೇಖಲೈ, ಎಸ್.ರಾಮ ಸುಬ್ರಮಣಿಯನ್, ಸಂಜಯ್ ರುದ್ರ ಮತ್ತು ಪಂಕಜ್ ದ್ವಿವೇದಿ ವಿರುದ್ಧದ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ದಾಖಲೆಗಳು ದೊರೆತಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
‘ಈ ನಾಲ್ವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಹೀಗಾಗಿ, ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಈ ನಾಲ್ವರು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳು ಈಗ ವಿಚಾರಣಾ ಮಾನ್ಯತೆ ಕಳೆದುಕೊಂಡಿವೆ’ ಎಂದು ವಿವರಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠವು ಈ ಕುರಿತಾದ ಅರ್ಜಿಗಳನ್ನು ವಿಲೇವಾರಿ ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.