ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94.73 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (ಎಸ್‌ಐಟಿ) ಪೊಲೀಸರು, ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಏಳು ಸಂಪುಟಗಳಲ್ಲಿ 3,072 ಪುಟಗಳನ್ನು ಒಳಗೊಂಡಿರುವ ಪ್ರಾಥಮಿಕ ಆರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ.
‘ಒಂದು ಹಂತದ ತನಿಖೆ ಪೂರ್ಣಗೊಳಿಸಿ, ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳಿಂದ ಇನ್ನೂ ಕೆಲವು ಮಾಹಿತಿ ಕಲೆ ಹಾಕಲಾಗುತ್ತಿದ್ದು, ತನಿಖೆ ಮುಂದುವರೆಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಅಂತಿಮ ಆರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷಕರಾಗಿದ್ದ ಪಿ.ಚಂದ್ರಶೇಖರನ್ ಅವರು ಮೇ 28ರಂದು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಮರಣ ಪತ್ರದಲ್ಲಿ ನಿಗಮದಲ್ಲಿ ನಡೆದಿದ್ದ ಅಕ್ರಮದ ಕುರಿತು ಕೆಲವು ಮಾಹಿತಿ ಉಲ್ಲೇಖಿಸಿದ್ದರು. ಅದಾದ ಮೇಲೆ, ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇಖರ್ ಅವರು, ‘ನಕಲಿ ದಾಖಲೆ ಸೃಷ್ಟಿಸಿ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ₹94.73 ಕೋಟಿ ಹಣ ವರ್ಗಾವಣೆ ಮಾಡಿಕೊಳ್ಳಲಾಗಿದೆ’ ಎಂದು ಆರೋಪಿಸಿ, ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದರು.
ದೂರು ಆಧರಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಿಇಒ ಸೇರಿದಂತೆ ಬ್ಯಾಂಕ್‌ನ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದ ಬಳಿಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು. ತನಿಖೆಗೆ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು.
ಏಳು ಪ್ರಕರಣ ದಾಖಲು
ಪ್ರಕರಣ ಸಂಬಂಧ ವಿವಿಧ ಠಾಣೆಗಳಲ್ಲಿ ದಾಖಲಾದ ಏಳು ಪ್ರಕರಣಗಳ ತನಿಖೆಯನ್ನೂ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿತ್ತು. ಆ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ನಿಗಮದ ಮಾಜಿ ವ್ಯವಸ್ಥಾಪಕ ಜೆ.ಬಿ.ಪದ್ಮನಾಭ, ಮಾಜಿ ಲೆಕ್ಕಾಧಿಕಾರಿ ಪರಶುರಾಮ್ ದುರ್ಗಣ್ಣನವರ್, ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಕ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ, ನೆಕ್ಕಂಟೆ ನಾಗರಾಜ್, ನಾಗರಾಜ್ ಅವರ ಸಂಬಂಧಿ ನಾಗೇಶ್ವರ ರಾವ್, ಹೈದರಾಬಾದ್‌ನ ಮಧ್ಯವರ್ತಿಗಳಾದ ಎಂ.ಚಂದ್ರಮೋಹನ್, ಗಾದಿರಾಜು ಸತ್ಯನಾರಾಯಣ ವರ್ಮಾ, ಉಡುಪಿಯ ಜಿ.ಕೆ.ಜಗದೀಶ್, ಬೆಂಗಳೂರಿನ ತೇಜ ತಮ್ಮಯ್ಯ, ಆಂಧ್ರಪ್ರದೇಶದ ಗಚ್ಚಿಬೌಲಿ ಪಿಟ್ಟಲ ಶ್ರೀನಿವಾಸ, ಹೈದರಾಬಾದ್‌ನ ಸಾಯಿತೇಜ, ಆಂಧ್ರಪ್ರದೇಶದ ಕಾಕಿ ಶ್ರೀನಿವಾಸ್ ಅವರನ್ನು ಬಂಧಿಸಲಾಗಿದೆ ಎಂದು ವಿವರಿಸಲಾಗಿದೆ.
ಬಂಧಿತರು ಮಾಜಿ ಸಚಿವ ನಾಗೇಂದ್ರ ಅವರ ಪಾತ್ರದ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು. ಆ ಮಾಹಿತಿ ಆಧರಿಸಿ ನಾಗೇಂದ್ರ ಅವರನ್ನೂ ಎಸ್ಐಟಿ ವಿಚಾರಣೆ ನಡೆಸಿತ್ತು.
‘ನೆಕ್ಕಂಟಿ ನಾಗರಾಜ್ ಅವರು ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಎಂಬುದಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
ಏನೇನು ಜಪ್ತಿ?: ಆರೋಪಿಗಳಿಂದ ₹16.83 ಕೋಟಿ ನಗದು, 16 ಕೆ.ಜಿ ಚಿನ್ನ (₹11.70 ಕೋಟಿ ಮೌಲ್ಯ), ಲ್ಯಾಂಬೋರ್ಗಿನಿ, ಮರ್ಸಿಡೀಸ್ ಬೆಂಜ್ ಕಾರು(₹4.51 ಕೋಟಿ ಮೌಲ್ಯ) ವಶಕ್ಕೆ ಪಡೆಯಲಾಗಿದೆ. ತನಿಖಾಧಿಕಾರಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯಲ್ಲಿ ₹3.91 ಕೋಟಿ ಹಾಗೂ ವಿವಿಧ ಬ್ಯಾಂಕ್ ಖಾತೆಗಳಲ್ಲಿ ₹13.72 ಕೋಟಿ ವಹಿವಾಟು ಸ್ಥಗಿತಗೊಳಿಸಲಾಗಿದೆ. ಒಟ್ಟು ₹49.96 ಕೋಟಿ ಚಿನ್ನ, ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.