ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ವಾಲ್ಮೀಕಿ ಶ್ರೀ ನಿರಶನ ಆರಂಭ

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ
Last Updated 10 ಫೆಬ್ರುವರಿ 2022, 20:25 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸುವುದು ಸೇರಿದಂತೆ ವಾಲ್ಮೀಕಿ ನಾಯಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಗುರುವಾರ ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

‘ಪರಿಶಿಷ್ಟ ಪಂಗಡದಲ್ಲಿ ಹೊಸ ಜಾತಿಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಈಗಿನ ಶೇ 3ರ ಮೀಸಲಾತಿ 1956ರ ಜನಗಣತಿ ಆಧರಿಸಿದೆ. ಹೀಗಾಗಿ, 2001ರ ಜನಗಣತಿಯ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಈಗಿನ ಜನಗಣತಿಯ ಪ್ರಕಾರ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ 8.5 ಅಥವಾ ಶೇ 9ರಷ್ಟು ನಿಗದಿ ಮಾಡಬೇಕು’ ಎಂದು ಸ್ವಾಮೀಜಿ ಪ್ರತಿಪಾದಿಸಿದರು.

‘ಈ ಹಿಂದೆಯೇ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರ ಭರವಸೆ ಮೇರೆಗೆ ಕೈಬಿಡಲಾಗಿತ್ತು. ಆದರೆ, ಇದುವರೆಗೂ ಭರವಸೆ ಈಡೇರಿಲ್ಲ. ಈಗಿನ ಮುಖ್ಯಮಂತ್ರಿ ಅವರು ಸಹ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಸಮಯ ವ್ಯರ್ಥ ಮಾಡುತ್ತಿವೆ. ಆದರೆ, ಸಮಾಜದ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಕೋವಿಡ್‌ ಕಾರಣದಿಂದ ಈಗ ಏಕಾಂಗಿಯಾಗಿ ಹೋರಾಟ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಸಮಾಜ ಬಾಂಧವರ ಜತೆ ಬೃಹತ್‌ ಹೋರಾಟ ರೂಪಿಸಲಾಗುವುದು’ ಎಂದರು.

‘ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ವರದಿಯನ್ನು ಅನುಷ್ಠಾನಗೊಳಿಸಬೇಕು. ನಕಲಿ ಜಾತಿ ಪ್ರಮಾಣ ಪತ್ರದ ಹಾವಳಿಗೆ ಕಡಿವಾಣ ಹಾಕಬೇಕು ಮತ್ತು ತಕ್ಷಣ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಬೇಡಿಕೆಗೆ ತಕ್ಕಂತೆ ಅನುದಾನ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

ಶಾಸಕ ರಾಜುಗೌಡ ಸೇರಿಸಮಾಜದ ಹಲವು ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಬೆಂಬಲ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT