ಬೆಂಗಳೂರು: ‘ನಿಗದಿತ ವೇಳಾಪಟ್ಟಿ ಅನುಸಾರ ಇದೇ 12ರಂದು ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು’ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಕೃಷ್ಣೇಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ, ‘ಸಂಘದ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲಾಗಿಲ್ಲ’ ಎಂಬ ಅರ್ಜಿದಾರರ ಆಕ್ಷೇಪಣೆಯನ್ನು ತಳ್ಳಿ ಹಾಕಿತು.
‘ಚುನಾವಣಾ ಫಲಿತಾಂಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಏಕಸದಸ್ಯ ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿರುವಾಗ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿ ಆದೇಶಿಸಿತು.