ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಡಿಯುವ ನೀರಿನ ಸಮಸ್ಯೆ ಉಲ್ಬಣ?

Published 1 ಮಾರ್ಚ್ 2024, 16:10 IST
Last Updated 1 ಮಾರ್ಚ್ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬರ ಇರುವ ಕಾರಣ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 1,272 ವಾರ್ಡ್‌ಗಳು ಮತ್ತು 7,377 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಟ್ಯಾಂಕರ್‌ಗಳು ಮತ್ತು ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.

ನೀರು ಪೂರೈಕೆಗಾಗಿ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಕೊಳವೆ ಬಾವಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಬಹುಪಾಲು ಕೊಳವೆ ಬಾವಿ ಮಾಲೀಕರ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟ್ಯಾಂಕರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಟೆಂಡರ್‌ ಕರೆಯಲು ಸೂಚಿಸಲಾಗಿದೆ. ಸಮಸ್ಯೆ ಬಂದ ಕೂಡಲೇ ಕುಡಿಯುವ ನೀರು ಪೂರೈಸಲಾಗುವುದು. 15 ದಿನಗಳಿಗೊಮ್ಮೆ ಖಾಸಗಿ ಕೊಳವೆಬಾವಿ ಮಾಲೀಕರಿಗೆ ಹಣಪಾವತಿ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಈಗ ನೀರಿನ ಸಮಸ್ಯೆ ಇರುವ 116 ಗ್ರಾಮಗಳಿಗೆ 175 ಟ್ಯಾಂಕರ್‌ಗಳ ಮೂಲಕ ಹಾಗೂ 382 ಗ್ರಾಮಗಳಿಗೆ 445 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಪ್ರತಿ ದಿನ ನೀರು ಪೂರೈಸಲಾಗುತ್ತಿದೆ. 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್‌ಗಳಿಗೆ 24 ಟ್ಯಾಂಕರ್‌ಗಳ ಮೂಲಕ 29 ವಾರ್ಡ್‌ಗಳಿಗೆ 17 ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.

ಬರಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಯ ಸಭೆಯನ್ನು 15 ದಿನಗಳಿಗೊಮ್ಮೆ ನಡೆಸಲಾಗುತ್ತಿದ್ದು, ಡಿಸೆಂಬರ್‌ನಿಂದ ಈವರೆಗೆ ತಾಲ್ಲೂಕು ಮಟ್ಟದ 600 ಸಭೆಗಳನ್ನು ನಡೆಸಲಾಗಿದೆ. ಫೆಬ್ರುವರಿ ಒಂದೇ ತಿಂಗಳಲ್ಲಿ ಕಾರ್ಯಪಡೆಯ 154 ಸಭೆ ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು, ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ. ಅಲ್ಲದೆ, 25 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದೂ ಕೃಷ್ಣಬೈರೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT