ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಸಭಾಧ್ಯಕ್ಷ ಸ್ಥಾನ; ಹೆಚ್ಚಿದ ಕುತೂಹಲ

Published 23 ಮೇ 2023, 0:10 IST
Last Updated 23 ಮೇ 2023, 0:10 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ, ಎಚ್‌.ಕೆ. ಪಾಟೀಲ, ಟಿ.ಬಿ. ಜಯಚಂದ್ರ ಅಥವಾ ಬಸವರಾಜ ರಾಯರಡ್ಡಿ ಪೈಕಿ ಒಬ್ಬರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ ವರಿಷ್ಠರು ಮುಂದಾಗಿದ್ದಾರೆ. ಆದರೆ, ಈ ನಾಲ್ವರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಕೊನೆ ದಿನವಾದ ಬುಧವಾರ (ಮೇ 24) ಸಭಾಧ್ಯಕ್ಷರನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ. 24ರಂದು ಆಯ್ಕೆ ನಡೆಯಬೇಕಿದ್ದರೆ, ಮಂಗಳವಾರ ಮಧ್ಯಾಹ್ನ 12 ಗಂಟೆ ಒಳಗೆ ನಾಮಪತ್ರ ಸಲ್ಲಿಸಬೇಕಿದೆ. ಆದರೆ, ಈ ಬಗ್ಗೆ ಸರ್ಕಾರದಿಂದ ಹೆಚ್ಚಿನ ಮಾಹಿತಿ ಬಂದಿಲ್ಲ ಎಂದು ವಿಧಾನಸಭಾ ಸಚಿವಾಲಯದ ಮೂಲಗಳು ತಿಳಿಸಿವೆ. ಹೀಗಾಗಿ, ಸದ್ಯ ನಡೆಯುತ್ತಿರುವ ಅಧಿವೇಶನದಲ್ಲಿ ಸಭಾಧ್ಯಕ್ಷರ ಆಯ್ಕೆ ನಡೆಯುವ ಬಗ್ಗೆ ಅನುಮಾನ ಮೂಡಿದೆ.

ಈ ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸೋಮವಾರ ಸಂಜೆಯೇ ನಗರಕ್ಕೆ ಬಂದಿದ್ದಾರೆ. ಸಭಾಧ್ಯಕ್ಷರ ಆಯ್ಕೆ ಕುರಿತಂತೆ ಅವರು ಪಕ್ಷದ ರಾಜ್ಯ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಬುಧವಾರ ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಭಾಧ್ಯಕ್ಷರ ಆಯ್ಕೆಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಯಾರಾಗಬಹುದು?: ಹಂಗಾಮಿ ಸಭಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್‌.ವಿ. ದೇಶಪಾಂಡೆ ಅವರು ಶಾಶ್ವತವಾಗಿ ಆ ಸ್ಥಾನ ವಹಿಸಿಕೊಳ್ಳಲು ಉತ್ಸುಕತೆ ತೋರಿಸಿಲ್ಲ. ಎಚ್‌.ಕೆ. ಪಾಟೀಲ ಸಹ ಸಭಾಧ್ಯಕ್ಷರಾಗಲು ಒಲವು ಹೊಂದಿಲ್ಲ. ಸೋಮವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಟಿ.ಬಿ. ಜಯಚಂದ್ರ ಅವರು ಸಂಪರ್ಕಕ್ಕೇ ಸಿಕ್ಕಿಲ್ಲ ಎನ್ನಲಾಗಿದೆ.

ಸಚಿವ ಸ್ಥಾನ ಸಿಗದೇ ಇದ್ದರೆ ಬಸವರಾಜ ರಾಯರಡ್ಡಿ ಅವರು ಸಭಾಧ್ಯಕ್ಷ ಸ್ಥಾನ‌ ವಹಿಸಿಕೊಳ್ಳಬಹುದು ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಈ ನಾಲ್ವರು ಅನುಭವಿಗಳಾಗಿರುವುದರಿಂದ, ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT