ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸಿಬಿ ಪೊಲೀಸರ ದಾಳಿ - SS ಮಲ್ಲಿಕಾರ್ಜುನ್‌ ಫಾರ್ಮ್‌ನಲ್ಲಿ ವನ್ಯಜೀವಿಗಳು ಪತ್ತೆ

ಮಾಜಿ ಸಚಿವರ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರ ದಾಳಿ
Last Updated 22 ಡಿಸೆಂಬರ್ 2022, 1:40 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರ ದಾವಣಗೆರೆಯ ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ವನ್ಯಜೀವಿಗಳು ಪತ್ತೆಯಾಗಿವೆ.

ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ನಗರದ ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆಗೆ ಒಳಪಡಿಸಿದ್ದರು. ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ’ ಎಂದು ಮೂಲಗಳು ತಿಳಿಸಿವೆ.

ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.
ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

***

ವನ್ಯಜೀವಿ ಕಾಯ್ದೆಯಡಿ ಪ್ರಕರಣ

ದಾವಣಗೆರೆ: ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾಗಿರುವ ವನ್ಯಜೀವಿಗಳನ್ನು ಈಗಾಗಲೇ ಇಲಾಖೆಯ ವಶಕ್ಕೆ ಪಡೆಯಲಾಗಿದ್ದು, ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ನ್ಯಾಯಾಲಯವನ್ನು ಕೋರಲಾಗಿದೆ. ಆದೇಶದ ಪ್ರತಿ ಸಿಗುತ್ತಿದ್ದಂತೆಯೇ ತನಿಖಾಧಿಕಾರಿಯನ್ನು ನೇಮಿಸಿ ಪ್ರಕರಣದ ತನಿಖೆ ಆರಂಭಿಸಿ ಶೀಘ್ರವೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ದಾವಣಗೆರೆ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್‌.ಎಚ್‌. ಜಗನ್ನಾಥ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ನ್ಯಾಯಾಲಯದ ಅನುಮತಿ ಪಡೆದು ವನ್ಯಜೀವಿಗಳನ್ನು ಅರಣ್ಯಕ್ಕೆ ಬಿಡಬೇಕೇ ಅಥವಾ ಪ್ರಾಣಿ ಸಂಗ್ರಹಾಲಯಕ್ಕೆ ರವಾನಿಸಬೇಕೇ ಎಂಬ ಕುರಿತು ನಿರ್ಧರಿಸಲಾಗುವುದು’ ಎಂದರು.

‘ವಶಕ್ಕೆ ಪಡೆದಿರುವ ವನ್ಯಜೀವಿಗಳನ್ನು ಸಾಕಲು ಪರವಾನಗಿ ಪಡೆದಿರುವ ಯಾವುದೇ ದಾಖಲೆಗಳನ್ನೂ ಸಂಬಂಧಪಟ್ಟವರು ನಮ್ಮ ಗಮನಕ್ಕೆ ಇನ್ನೂ ತಂದಿಲ್ಲ’ ಎಂದು ಪ್ರತಿಕ್ರಿಯಿಸಿದರು.

***

‘ಪರವಾನಗಿ ಪಡೆದೇ ಸಾಕಿದ್ದೆವು’

‘ಪರವಾನಗಿ ಪಡೆದೇ 2000ರಿಂದಲೇ ನಮ್ಮ ಫಾರ್ಮ್‌ ಹೌಸ್‌ನಲ್ಲಿ ಜಿಂಕೆ ಸಾಕುತ್ತಿದ್ದೆವು. ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಪರವಾನಗಿ ಪಡೆದು ಸಾಕುತ್ತಿದ್ದ ನಾಲ್ಕೈದು ಜಿಂಕೆಗಳು ಮರಿ ಹಾಕಿದ್ದರಿಂದ ಇವುಗಳ ಸಂಖ್ಯೆ ಈಗ ಹೆಚ್ಚಾಗಿದೆ. ಕಾನೂನು ಪ್ರಕಾರವೇ ನಾವು ಸಾಕುತ್ತಿದ್ದೇವೆ’ ಎಂದು ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT