ಬೆಂಗಳೂರು: ‘ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ವಿಚಾರಣೆ ನಡೆಯಬೇಕು’ ಎಂಬ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಲಾದ ಎರಡು ಅರ್ಜಿಗಳ ಮೇಲಿನ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಇದನ್ನು ಪ್ರಶ್ನಿಸಿ ಆರೋಪಿಗಳಾದ ವಿಕ್ರಂ ಬಳ್ಳಾರಿ, ಕೀರ್ತಿಕುಮಾರ ಬಸವರಾಜ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ ಸಲ್ಲಿಸಿದ್ದ ಕ್ರಿಮಿನಲ್ ಹಾಗೂ ಮತ್ತೊಬ್ಬ ಆರೋಪಿ ಬಸವರಾಜ ಮುತ್ತಗಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆಯನ್ನು ಮಂಗಳವಾರ ಮುಕ್ತಾಯಗೊಳಿಸಿದರು.
ಅರ್ಜಿದಾರರ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್, ‘ಮರು ವಿಚಾರಣೆ ನಡೆಸಿದರೆ ಕಾನೂನು ತೊಡಕು ಉಂಟಾಗುತ್ತದೆ’ ಎಂಬ ಅಂಶಗಳ ಮೇಲೆ ನ್ಯಾಯಪೀಠಕ್ಕೆ ಬೆಳಕು ಚೆಲ್ಲಿದರು.
ಇದನ್ನು ಅಲ್ಲಗಳೆದ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ’ಈ ಪ್ರಕರಣದಲ್ಲಿ 1–6ನೇ ಆರೋಪಿಗಳ ಬಗ್ಗೆ ಅಂದಿನ ರಾಜ್ಯ ಸರ್ಕಾರ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಶಾಸಕ ವಿನಯ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ಆದರೆ, ನಂತರ ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ 7–21ರವರೆಗೆ ಹೊಸ ಆರೋಪಿಗಳನ್ನು ಸೇರ್ಪಡೆ ಮಾಡಲಾಗಿದೆ. ರಾಜ್ಯ ಸರ್ಕಾರ ನಡೆಸಿದ್ದ ತನಿಖೆಯಲ್ಲಿ ಪ್ರಕರಣವನ್ನೇ ಕಲಸುಮೇಲೋಗರ ಮಾಡಲಾಗಿತ್ತು. ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿತ್ತು. ಐದು ಜನ ಪ್ರತ್ಯಕ್ಷ ಸಾಕ್ಷಿಗಳನ್ನು ಬೆದರಿಸಿ ಕೋರ್ಟ್‌ಗೆ ಕರೆತರಲಾಗಿತ್ತು. ಹಾಗಾಗಿ, ಪ್ರಕರಣದ ಮರು ವಿಚಾರಣೆ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
ಅಪರಾಧ ಪ್ರಕ್ರಿಯಾ ದಂಡ ಸಂಹಿತೆ–1973ರ ಕಲಂ (ಸಿಆರ್‌ಪಿಸಿ) 230 ಮತ್ತು 231ರ ಅನುಸಾರ ಪ್ರಕರಣದ ಮರು ವಿಚಾರಣೆಯನ್ನು ನಿಗದಿಪಡಿಸಿ ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂನ್ 28ರಂದು ಆದೇಶಿಸಿತ್ತು. ಅರ್ಜಿದಾರರು ಇದಕ್ಕೆ ತಕರಾರು ಸಲ್ಲಿಸಿದ್ದರು. ಆದರೆ, ವಿಶೇಷ ನ್ಯಾಯಾಲಯ ಈ ತಕರಾರನ್ನು ಮಾನ್ಯ ಮಾಡಲು ನಿರಾಕರಿಸಿತ್ತು.
ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.